ADVERTISEMENT

ಅವಧಿ ವಿಸ್ತರಣೆ ಇಲ್ಲ; ಅ.7ಕ್ಕೆ ಸಮೀಕ್ಷೆ ಮುಗಿಸಿ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2025, 18:27 IST
Last Updated 26 ಸೆಪ್ಟೆಂಬರ್ 2025, 18:27 IST
<div class="paragraphs"><p>ಸಿದ್ದರಾಮಯ್ಯ&nbsp;, ಮುಖ್ಯಮಂತ್ರಿ</p></div>

ಸಿದ್ದರಾಮಯ್ಯ , ಮುಖ್ಯಮಂತ್ರಿ

   

ಬೆಂಗಳೂರು: ಯಾವುದೇ ಕಾರಣಕ್ಕೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅವಧಿಯನ್ನು ವಿಸ್ತರಿಸುವುದಿಲ್ಲ. ಅಕ್ಟೋಬರ್ 7ರ ಒಳಗೆ ಸಮೀಕ್ಷೆಯನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಜತೆಗೆ ಶುಕ್ರವಾರ ನಡೆಸಿದ ವಿಡಿಯೊ ಸಂವಾದದಲ್ಲಿ ಸಮೀಕ್ಷೆಯ ಪ್ರಗತಿ ಕುರಿತು ಮಾಹಿತಿ ಪಡೆದ ಸಿದ್ದರಾಮಯ್ಯ, ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳಿಸಲೇಬೇಕು ಎಂದು ನಿರ್ದೇಶನ ನೀಡಿದರು.

ADVERTISEMENT

1.43 ಕೋಟಿ ಮನೆಗಳ ಸಮೀಕ್ಷೆ ನಡೆಸಬೇಕಿದೆ. ಆದರೆ ಈವರೆಗೆ 2.76 ಲಕ್ಷ ಮನೆಗಳ ಸಮೀಕ್ಷೆ ಮಾತ್ರ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದಾಗ, ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.

‘ಸಮೀಕ್ಷೆಗೆ ಬಳಸುತ್ತಿರುವ ಆ್ಯಪ್‌ನಲ್ಲಿ ಸಮಸ್ಯೆ ಇದೆ, ನೆಟ್‌ವರ್ಕ್‌ ಸಿಗುತ್ತಿಲ್ಲ, ಸಮೀಕ್ಷೆ ನಡೆಸುವುದು ಕಷ್ಟವಾಗಿದೆ. ಸೂಚಿತ ಅವಧಿಯಲ್ಲಿ ಸಮೀಕ್ಷೆ ಪೂರ್ಣಗೊಳಿಸಲು ಸಾಧ್ಯವಿಲ್ಲ’ ಎಂದು ಶಿಕ್ಷಕರು ದೂರುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದರು. ‘ಅವೆಲ್ಲವನ್ನೂ ಬಗೆಹರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಿ’ ಎಂದು ಸಿದ್ದರಾಮಯ್ಯ ಸೂಚಿಸಿದರು ಎಂದು ಮಾಹಿತಿ ನೀಡಿವೆ.

‘ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಸಿಇಒಗಳು ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು’ ಎಂದು ಸೂಚಿಸಿದ್ದಾರೆ. 

‘ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗೆ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಸಮೀಕ್ಷೆ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿಡಿಯೊ ಸಂವಾದದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ, ಶಿವರಾಜ ತಂಗಡಗಿ, ಕೃಷ್ಣ ಬೈರೇಗೌಡ, ರಹೀಂ ಖಾನ್, ಬೈರತಿ ಸುರೇಶ್, ಮಧು ಬಂಗಾರಪ್ಪ, ಎನ್‌.ಎಸ್‌. ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ಆರ್. ನಾಯ್ಕ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಭಾಗಿಯಾಗಿದ್ದರು.

ಜಿಲ್ಲಾಧಿಕಾರಿಗಳಿಗೆ ಸೂಚನೆ

*ತಾಂತ್ರಿಕ ಸಮಸ್ಯೆಗಳು ಎದುರಾದರೆ, ಸ್ಥಳೀಯ ಮಟ್ಟದಲ್ಲಿಯೇ ಇತರ ಇಲಾಖೆಗಳ ತಾಂತ್ರಿಕ ಸಿಬ್ಬಂದಿಯ ನೆರವು ಪಡೆದು ಬಗೆಹರಿಸಿಕೊಳ್ಳಬೇಕು

*ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವಲ್ಲಿ ಅನುದಾನಿತ ಶಾಲೆಗಳ ಶಿಕ್ಷಕರನ್ನೂ ಸಮೀಕ್ಷಕರಾಗಿ ನಿಯೋಜಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು
ಸಂಪರ್ಕದಲ್ಲಿರಬೇಕು

*ಸಮೀಕ್ಷಾ ಕಾರ್ಯದ ಮೇಲ್ವಿಚಾರಣೆಗಾಗಿ ಪ್ರತಿ ತಾಲ್ಲೂಕಿಗೂ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರನ್ನು ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡಬೇಕು

*ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಿಗೆ ಪುನಃ ಭೇಟಿ ನೀಡಿ ಸಮೀಕ್ಷೆ ಪೂರ್ಣಗೊಳಿಸಬೇಕು

*ಪ್ರತಿದಿನ ಜಿಲ್ಲಾವಾರು ಶೇ 10ರಷ್ಟು ಗುರಿ ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು

‘ಸಮೀಕ್ಷೆಗೆ ಮಾಹಿತಿ ಕಡ್ಡಾಯವಲ್ಲ’

‘ರಾಜ್ಯದ ಎಲ್ಲ ಕುಟುಂಬಗಳನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದ್ದರೂ, ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆ’ ಎಂದು ಹಿಂದುಳಿದ ವರ್ಗಗಳ ಆಯೋಗ ಹೇಳಿದೆ. 

ಸಮೀಕ್ಷೆಗೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ನ್ಯಾಯಪೀಠ, ಮಾಹಿತಿ ನೀಡುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸುವಂತೆ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ಈ ಬೆನ್ನಲ್ಲೇ, ಸುತ್ತೋಲೆ ಹೊರಡಿಸಿರುವ ಆಯೋಗವು, ‘ಸಮೀಕ್ಷೆಗೆ ಮಾಹಿತಿ ನೀಡಿ ಎಂದು ಆಯೋಗವು ಒತ್ತಾಯ ಮಾಡುತ್ತಿಲ್ಲ’ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.