ADVERTISEMENT

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 9:51 IST
Last Updated 26 ಜುಲೈ 2021, 9:51 IST
   

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ.ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರಿಗೆಯಡಿಯೂರಪ್ಪರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಯಡಿಯೂರಪ್ಪನವರ ಜೊತೆಸಚಿವರಾದ ಲಕ್ಷ್ಮಣ ಸವದಿ‌, ಮಾಧುಸ್ವಾಮಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಡಾ.ಕೆ ಸುಧಾಕರ್ ರಾಜಭವನಕ್ಕೆ ಭೇಟಿ ನೀಡಿದ್ದರು.

ಹೊಸ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕರಿಸುವವರೆಗೂ ಯಡಿಯೂರಪ್ಪನವರು ಹಂಗಾಮಿ ಮುಖ್ಯಮಂತ್ರಿಯಾಗಿಮುಂದುವರಿಯಲಿದ್ದಾರೆ.

ADVERTISEMENT

ರಾಜೀನಾಮೆ ಸಲ್ಲಿಕೆ ಬಳಿಕ ಮಾತನಾಡಿದ ಅವರು,ದೇಶದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ಕೃತಜ್ಞತೆಗಳು, 75 ವರ್ಷ ದಾಟಿದ ನನ್ನ ಮೇಲೆ ಅಭಿಮಾನ ಇಟ್ಟು ನನಗೆ ಎರಡು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದ್ದಾರೆ. ಅವರಿಗೆ ಮತ್ತೊಮ್ಮೆ ಕೃತಜ್ಞತೆಗಳು.

ಎರಡು ತಿಂಗಳ ಹಿಂದೆಯೇ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಆದರೆ, ಎರಡು ವರ್ಷ ತುಂಬಿದ ದಿನ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ರಾಜೀನಾಮೆ ಕೊಟ್ಟಿದ್ದೇನೆ. ನನ್ನ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ.4 ಬಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ರಾಜ್ಯದ ಜನ ಅವಕಾಶ ನೀಡಿದ್ದಾರೆ. ಅದಕ್ಕೆ ಋಣಿ ಎಂದು ಹೇಳಿದ್ದಾರೆ.

ಸ್ವಇಚ್ಛೆಯಿಂದ ರಾಜೀನಾಮೆ: ನನ್ನ ಮೇಲೆ ದೆಹಲಿಯಿಂದ ಯಾವುದೇ ಒತ್ತಡ ಇಲ್ಲ. ಬೇರೆಯವರಿಗೆ ಅವಕಾಶ ಸಿಗಬೇಕೆಂದು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ. ವಿಶೇಷವಾಗಿ ಶಿಕಾರಿಪುರದ ಜನರಿಗೆ ನನ್ನ ಕೃತಜ್ಞತೆಗಳು. ಮತ್ತೊಮ್ಮೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎಂದರು.

ಮುಂದಿನ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ಶಿಫಾರಸು ಮಾಡುವುದಿಲ್ಲ.ಪಕ್ಷದ ಸಂಘಟನೆ ಬಲಪಡಿಸಲು ಕೆಲಸ ಮಾಡುತ್ತೇನೆಯೇ ಹೊರತು. ಬೇರೆ ಯಾವುದೇ ಸ್ಥಾನಮಾನವನ್ನು ಒಪ್ಪಿಕೊಳ್ಳುವುದಿಲ್ಲ. ಮುಂದೆ ಬರುವ ಮುಖ್ಯಮಂತ್ರಿಗೂ ನೆರವು ನೀಡುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.