ಸಿದ್ದರಾಮಯ್ಯ
ಬೆಂಗಳೂರು: ‘ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಬಜೆಟ್‌ನಲ್ಲಿ ಮೀಸಲಿರಿಸಿರುವ ₹ 8 ಸಾವಿರ ಕೋಟಿಯಲ್ಲಿ ವಿಧಾನ ಪರಿಷತ್ ಸದಸ್ಯರಿಗೂ ಅನುದಾನ ಹಂಚಿಕೆ ಮಾಡುವ ಕುರಿತು ಪರಿಶೀಲಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶ್ವಾಸನೆ ನೀಡಿದ್ದಾರೆ.
ಆಡಳಿತ ಪಕ್ಷದ ವಿಧಾನಪರಿಷತ್ ಸದಸ್ಯರ ಜೊತೆ ಮಂಗಳವಾರ ಅವರು ಸಭೆ ನಡೆಸಿದರು. ಶಾಸಕರಿಗೆ ನೀಡಿದಂತೆ ತಮಗೂ ಕ್ಷೇತ್ರದ ಅಭಿವೃದ್ಧಿಗೂ ₹ 50 ಕೋಟಿ ವಿಶೇಷ ಅನುದಾನ ನೀಡುವಂತೆ ವಿಧಾನ ಪರಿಷತ್ ಸದಸ್ಯರು ಬೇಡಿಕೆ ಸಲ್ಲಿಸಿದ್ದಾರೆ.
ಸಚಿವರ ನಡೆ ವಿರುದ್ಧ ಆಡಳಿತ ಪಕ್ಷದ ಪರಿಷತ್ ಸದಸ್ಯರ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಸಚಿವರು ನಮ್ಮ ಪತ್ರಗಳಿಗೆ ಮಾನ್ಯತೆ ನೀಡುತ್ತಿಲ್ಲ. ಭೇಟಿಗೆ ಅವಕಾಶ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ದೂರವಾಣಿ ಕರೆಯನ್ನೂ ಸ್ವೀಕರಿಸುವುದಿಲ್ಲವೆಂದು ಬೇಸರ ತೋಡಿಕೊಂಡಿದ್ದಾರೆ. ತಮ್ಮ ಅಹವಾಲುಗಳಿಗೆ ಸ್ಪಂದಿಸುವಂತೆ ಸಚಿವರಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ.
ಈಗ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಮುಂದಿನ ಸಚಿವ ಸಂಪುಟ ಪುನರ್ ರಚನೆಯ ಸಂದರ್ಭದಲ್ಲಿ ಮೂವರು ಪರಿಷತ್ ಸದಸ್ಯರಿಗೆ ಸಚಿವ ಸ್ಥಾನ ನೀಡಬೇಕು. ಜೊತೆಗೆ, ಶಾಸಕರಿಗೆ ನೀಡಿರುವ ಶಿಷ್ಟಾಚಾರವನ್ನು ನಮಗೂ ಅನ್ವಯಿಸಬೇಕು ಎಂದೂ ಬೇಡಿಕೆ ಇಟ್ಟಿದ್ದಾರೆ ಎಂದೂ ತಿಳಿದುಬಂದಿದೆ.
ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ, ‘ವಿಶೇಷ ಅನುದಾನ ನೀಡಬೇಕೆಂಬ ಪರಿಷತ್ ಸದಸ್ಯರ ಬೇಡಿಕೆಯನ್ನು ಪರಿಶೀಲಿಸಲಾಗುವುದು’ ಎಂದರು. ‘ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ಬೆಂಗಳೂರು ನಗರದ ಶಾಸಕರೊಂದಿಗೆ ಬುಧವಾರ ಸಭೆ ನಡೆಸಲಾಗುವುದು’ ಎಂದೂ ತಿಳಿಸಿದರು.
ಪರಿಷತ್ ಸಭಾ ನಾಯಕ ಎನ್.ಎಸ್. ಬೋಸರಾಜು ಮಾತನಾಡಿ, ‘ಪರಿಷತ್ ಸದಸ್ಯರು ತಮ್ಮ ಕ್ಷೇತ್ರಗಳಿಗೆ ಸಂಬಂಧಪಟ್ಟ ಅಹವಾಲುಗಳನ್ನು ಮುಖ್ಮಮಂತ್ರಿಯ ಗಮನಕ್ಕೆ ತಂದಿದ್ದಾರೆ. ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸುವ ಆಶ್ವಾಸನೆಯನ್ನು ಅವರು ನೀಡಿದ್ದಾರೆ’ ಎಂದರು.
ಸಚಿವರ ವಿರುದ್ಧ ಪರಿಷತ್ ಸದಸ್ಯರ ಅಸಮಾಧಾನದ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅದೆಲ್ಲರದರ ಬಗ್ಗೆ ಮುಖ್ಯಮಂತ್ರಿಯ ಗಮನಕ್ಕೆ ತಂದಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿಯ ಗಮನಕ್ಕೂ ತಂದಿದ್ದಾರೆ. ಆ ರೀತಿಯ ದೂರಿನ ಚರ್ಚೆ ಮಾಡುತ್ತೇವೆ. ಅನುದಾನ ಹಂಚಿಕೆ ಬಗ್ಗೆ ಈಗಾಗಲೇ ಎಲ್ಲ ಸದಸ್ಯರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.