ADVERTISEMENT

ಕೋವಿಡ್ ಲಸಿಕೆಯ ಮೊದಲ ಡೋಸ್‌ ಹಾಕಿಸಿಕೊಂಡ ಸಿಎಂ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 12:52 IST
Last Updated 12 ಮಾರ್ಚ್ 2021, 12:52 IST
   

ಬೆಂಗಳೂರು: ನಗರದ ಪಿಎಂಎಸ್‌ಎಸ್‌ವೈ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೋವಿಡ್ ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡರು.

ಈ ಕುರಿತು ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಯಡಿಯೂರಪ್ಪ, 'ಇಂದು ನಾನು ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ 'ಮೇಡ್ ಇನ್ ಇಂಡಿಯಾ' ಕೋವಿಡ್-19 ಲಸಿಕೆಯ ಮೊದಲ ಡೋಸ್ ಹಾಕಿಸಿಕೊಂಡಿದ್ದೇನೆ. ಅರ್ಹರು ತಮ್ಮ ಹೆಸರನ್ನು ನೋಂದಾಯಿಸಿ ಆದಷ್ಟು ಬೇಗನೇ ಕೋವಿಡ್ ಲಸಿಕೆ ಪಡೆಯುವಂತೆ ಮನವಿ ಮಾಡುತ್ತೇನೆ' ಎಂದಿದ್ದಾರೆ.

ಅಲ್ಲದೆ ದೇಶ ಹಾಗೂ ರಾಜ್ಯವನ್ನು ಕೋವಿಡ್ ಮುಕ್ತಗೊಳಿಸಲು ಎಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭಾರತ್ ಬಯೋಟೆಕ್ ದೇಶೀಯವಾಗಿ ಅಭಿವೃದ್ಧಿಪಡಿಸಿದ 'ಕೋವ್ಯಾಕ್ಸಿನ್' ಕೋವಿಡ್ ಲಸಿಕೆಯನ್ನು ಹಾಕಿಸಿಕೊಳ್ಳಲಾಯಿತು.

ಕೋವಿಡ್ ಲಸಿಕೆ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರಿಗೆ 30 ನಿಮಿಷಗಳ ವರೆಗೆ ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾ ವಹಿಸಲಾಗುತ್ತಿದೆ.

ADVERTISEMENT

ಇದೇ ವೇಳೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಕೋವಿಡ್-19 ಲಸಿಕೆ ಹಾಕಿಸಿಕೊಂಡರು.

'ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಇಂದು ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದೆ ಎಂದು ಹಂಚಿಕೊಳ್ಳಲು ಸಂತಸವಾಗುತ್ತಿದೆ. ಎಲ್ಲ ಹಿರಿಯ ನಾಗರಿಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬೇಕೆಂದು ಕೋರುತ್ತೇನೆ. ಭಾರತ ಮತ್ತು ಕರ್ನಾಟಕವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.