ADVERTISEMENT

ಕೋವಿಡ್ ನಿಯಂತ್ರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಜೆ ತುರ್ತು ಸಭೆ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2021, 6:24 IST
Last Updated 27 ನವೆಂಬರ್ 2021, 6:24 IST
ಬಸವರಾಜ ಬೊಮ್ಮಾಯಿ (ಪ್ರಜಾವಾಣಿ ಸಂಗ್ರಹ ಚಿತ್ರ)
ಬಸವರಾಜ ಬೊಮ್ಮಾಯಿ (ಪ್ರಜಾವಾಣಿ ಸಂಗ್ರಹ ಚಿತ್ರ)   

ಬೆಂಗಳೂರು: ಧಾರವಾಡ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೋವಿಡ್–19 ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ಪರಿಸ್ಥಿತಿ ನಿಯಂತ್ರಣ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಜೆ ತುರ್ತು ಸಭೆ ನಡೆಯಲಿದೆ.

ಸುದ್ದಿಗಾರರ ಜತೆ ಶನಿವಾರ ಬೆಳಿಗ್ಗೆ ಮಾತನಾಡಿದ ಮುಖ್ಯಮಂತ್ರಿ, ‘ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ನೆರೆಯ ಕೇರಳ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ. ಕೆಲವು ರಾಷ್ಟ್ರಗಳಲ್ಲಿ ಕೊರೊನಾ ವೈರಾಣುವಿನ ಹೊಸ ತಳಿ ಕಂಡುಬಂದಿದೆ. ಈ ಎಲ್ಲ ವಿಷಯಗಳ ಬಗ್ಗೆಯೂ ಚರ್ಚಿಸಿ, ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದರು.

ಆರೋಗ್ಯ ಇಲಾಖೆ, ವಿಪತ್ತು ನಿರ್ವಹಣಾ ಇಲಾಖೆಗಳ ಅಧಿಕಾರಿಗಳು, ಕೋವಿಡ್ ಸಲಹಾ ಸಮಿತಿ ಸದಸ್ಯರು, ತಾಂತ್ರಿಕ ಸಲಹಾ ಸಮಿತಿ ತಜ್ಞರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರೆಲ್ಲರ ಜತೆಗೆ ಚರ್ಚಿಸಿದ ಬಳಿಕ ನಿಯಂತ್ರಣ ಕ್ರಮಗಳನ್ನು ಪ್ರಕಟಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.

ಕೋವಿಡ್ ಸೋಂಕು ಹರಡದಂತೆ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲೇಬೇಕಿದೆ. ಈ ಕಾರಣದಿಂದ ಸಾಕಷ್ಟು ಮುಂಚಿತವಾಗಿಯೇ ರಾಜ್ಯ ಸರ್ಕಾರ ತೀರ್ಮಾನಗಳನ್ನು ಕೈಗೊಳ್ಳುತ್ತಿದೆ ಎಂದರು.

ಕಡತ ವಿಲೇವಾರಿಗೆ ಸೂಚನೆ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಡತ ವಿಲೇವಾರಿ ವಿಳಂಬ ಆಗುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ‘ತ್ವರಿತವಾಗಿ ಕಡತಗಳ ವಿಲೇವಾರಿಗೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಈ ಹಿಂದೆಯೇ ಸೂಚನೆ ನೀಡಲಾಗಿದೆ. ಕೆಲವು ಇಲಾಖೆಗಳಲ್ಲಿ ತಾಂತ್ರಿಕ ಮತ್ತು ಕಾನೂನಾತ್ಮಕ ತೊಡಕುಗಳ ಕಾರಣದಿಂದ ವಿಳಂಬ ಆಗಿರಬಹುದು. ಈ ಸಮಸ್ಯೆಗಳನ್ನೂ ಪರಿಹರಿಸಿ ಕಡತ ವಿಲೇವಾರಿ ಮಾಡುವಂತೆ ಸೂಚಿಸಲಾಗುತ್ತದೆ’ ಎಂದರು.

ಇನ್ನಷ್ಟು ಸುದ್ದಿಗಳು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.