ADVERTISEMENT

ಕೊರೊನಾ: ಸಿಎಂ ಬಿ.ಎಸ್.ಯಡಿಯೂರಪ್ಪ ಶೀಘ್ರ ಚೇತರಿಕೆಗೆ ಗಣ್ಯರ ಹಾರೈಕೆ

ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿ ಅನೇಕ ನಾಯಕರಿಂದ ಟ್ವೀಟ್

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 5:08 IST
Last Updated 3 ಆಗಸ್ಟ್ 2020, 5:08 IST
ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ವೈರಸ್ ಸೋಂಕಿನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವು ನಾಯಕರು ಹಾರೈಸಿದ್ದಾರೆ.

‘ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಮುಖ್ಯಮಂತ್ರಿ, ಸಚಿವರು ಹಾಗೂ ಈ ಮಾರಕ ಸೋಂಕು ತಗುಲಿರುವ ಜನತೆ ಶೀಘ್ರ ಚೇತರಿಸಿಕೊಂಡು, ಈ ಸೋಂಕು ಮೆಟ್ಟಿನಿಲ್ಲುವ ಶಕ್ತಿ ದಯಪಾಲಿಸುವಂತೆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಎಲ್ಲರ ಪ್ರಾರ್ಥನೆ, ಆಶೀರ್ವಾದ, ಸದಾಶಯ ನಿಮ್ಮೊಂದಿಗೆ ಇದೆ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಮುಖ್ಯಮಂತ್ರಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ಹಾರೈಸುತ್ತೇನೆ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

ADVERTISEMENT

‘ಯಡಿಯೂರಪ್ಪ ಅವರು ಶೀಘ್ರ ಚೇತರಿಸಿಕೊಳ್ಳಲಿ. ಉತ್ತಮ ಆರೋಗ್ಯದೊಂದಿಗೆ ಮತ್ತೆ ಜನಸೇವೆ ಮಾಡುವಂತಾಗಲಿ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಹುಟ್ಟು ಹೋರಾಟಗಾರರು, ಜನನಾಯಕರು, ರಾಜ್ಯದ ಜನಪ್ರಿಯ ಯಡಿಯೂರಪ್ಪನವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಬಂದಿದ್ದು, ಆದಷ್ಟು ಬೇಗನೆ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯದ ಜನತೆಯ ಹಾರೈಕೆ, ಪ್ರಾರ್ಥನೆಗಳು ನಿಮ್ಮೊಂದಿಗಿದೆ. ಶೀಘ್ರದಲ್ಲಿ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯದಲ್ಲಿ ತೊಡಗಿಕೊಳ್ಳಲಿದ್ದೀರಿ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಟ್ವೀಟ್ ಮಾಡಿದ್ದಾರೆ.

‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಬೇಸರವಾಗಿದೆ. ಮುಖ್ಯಮಂತ್ರಿಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದಾರೆ.

‘ಯಡಿಯೂರಪ್ಪನವರೇ, ನೀವು ರಾಜ್ಯದ ದಣಿವರಿಯದ ಹೋರಾಟಗಾರ. ನಿಮ್ಮ ಶೀಘ್ರ ಚೇತರಿಕೆಗೆ ಪ್ರಾರ್ಥನೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.