ADVERTISEMENT

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪಗೆ ಕೊರೊನಾ ಸೋಂಕು ದೃಢ; ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2020, 0:45 IST
Last Updated 3 ಆಗಸ್ಟ್ 2020, 0:45 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ(78) ಅವರಿಗೆ ಕೋವಿಡ್‌–19 ಇರುವುದು ಭಾನುವಾರ ದೃಢಪಟ್ಟಿದೆ. ಈ ಬಗ್ಗೆ ಯಡಿಯೂರಪ್ಪ ಅವರ ಸಾಮಾಜಿಕ ಖಾತೆಗಳಲ್ಲಿ ಪ್ರಕಟಿಸಲಾಗಿದೆ.

ಕೊರೊನಾ ಸೋಂಕು ಲಕ್ಷಣಗಳು ಯಡಿಯೂರಪ್ಪ ಅವರಿಗೆ ಕಾಣಿಸಿಕೊಂಡಿಲ್ಲ. ಆದರೆ, ಕೋವಿಡ್‌ ಪರೀಕ್ಷೆಯಲ್ಲಿ ಪಾಸಿಟಿವ್‌ ಬಂದಿರುವುದರಿಂದ ವೈದ್ಯರ ಸಲಹೆಯಂತೆ ಅವರು ಆಸ್ಪತ್ರೆಗೆ ದಾಖಲಾಗುತ್ತಿರುವುದಾಗಿ ಹೇಳಿದ್ದಾರೆ.

ಯಡಿಯೂರಪ್ಪ ಅವರು ಹಳೆ ವಿಮಾನ ನಿಲ್ದಾಣ ರಸ್ತೆಯ (ಎಚ್‌ಎಎಲ್) ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ADVERTISEMENT

ಯಡಿಯೂರಪ್ಪ ಅವರ ಕಾರು ಚಾಲಕನಿಗೆ ಹಾಗೂ ಅವರ ಅಡುಗೆ ಸಿಬ್ಬಂದಿಯೊಬ್ಬರಿಗೆ 15 ದಿನಗಳಿಗೆ ಹಿಂದೆ ಕೋವಿಡ್‌ ದೃಢಪಟ್ಟಿತ್ತು. ಆಗ ಪರೀಕ್ಷೆ ಮಾಡಿಸಿದ್ದಾಗ ಮುಖ್ಯಮಂತ್ರಿಗೆ ಸೋಂಕು ದೃಢಪಟ್ಟಿರಲಿಲ್ಲ.

ಅವರ ಗೃಹ ಕಚೇರಿ ಕಾವೇರಿ ಹಾಗೂ ಡಾಲರ್ಸ್ ಕಾಲೊನಿಯ 'ಧವಳಗಿರಿ' ನಿವಾಸವನ್ನು ಸೋಂಕು ನಿವಾರಕ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದೆ.

'ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್‌ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ' ಎಂದು ಭಾನುವಾರ ರಾತ್ರಿ ಟ್ವೀಟಿಸಿದ್ದಾರೆ.


ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೂ ಕೊರೊನಾ ಸೋಂಕು ಇರುವುದು ಭಾನುವಾರ ದೃಢಪಟ್ಟಿದ್ದು, ಅವರೂ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಯಡಿಯೂರಪ್ಪ ಅವರಿಗೆ ಕೋವಿಡ್‌ ದೃಢಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಶೀಘ್ರ ಗುಣಮುಖರಾಗುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಬಹಳಷ್ಟು ಪೋಸ್ಟ್‌ಗಳು ಪ್ರಕಟಣಗೊಳ್ಳುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.