
ಆರ್.ಅಶೋಕ
ಬೆಂಗಳೂರು: ‘ಮುಖ್ಯಮಂತ್ರಿ ಹುದ್ದೆಗಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ರಾಜ್ಯದಲ್ಲಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು.
ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಬೇಕು ಎಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟ ನಿರ್ಣಾಯಕ ಹಂತಕ್ಕೆ ಬಂದಿದೆ. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ತೀರ್ಮಾನ ನೀಡದೇ ಇದ್ದರೆ, ಸರ್ಕಾರ ನಡೆಯುವುದಿಲ್ಲ. ಅಧಿಕಾರಿಗಳೂ ಕೆಲಸ ಮಾಡುವುದಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದರು.
‘ಈ ಕಚ್ಚಾಟದಿಂದಾಗಿ ಸಾರ್ವಜನಿಕರು, ರೈತರು, ವಿದ್ಯಾರ್ಥಿಗಳ ಸಮಸ್ಯೆಗಳನ್ನು ಕೇಳಿಸಿಕೊಳ್ಳುವವರು ಯಾರೂ ಇಲ್ಲದಂತಾಗಿದೆ. ರಾಜ್ಯದ ಮುಖ್ಯಮಂತ್ರಿ ಯಾರಾಗಿರುತ್ತಾರೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಕೂಡಲೇ ಸ್ಪಷ್ಟಪಡಿಸಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.