ನವದೆಹಲಿ: ‘ಅಲ್ಪಾವಧಿ ಬೆಳೆ ಸಾಲ ವಿತರಣೆಗೆ ಸಾಧ್ಯವಾಗುವಂತೆ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೆ
ಒದಗಿಸಿರುವ ನಬಾರ್ಡ್ ನೆರವು ಕಡಿತಗೊಳಿಸಿರುವುದರಿಂದ ರೈತಾಪಿ ವರ್ಗ ಸಂಕಷ್ಟಕ್ಕೆ ಈಡಾಗಿದೆ. ಹೀಗಾಗಿ, ನಬಾರ್ಡ್ ನೆರವು ಹೆಚ್ಚಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಹವಾಲು ಸಲ್ಲಿಸಿದರು.
ರಾಜ್ಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಧಾನಿ ಅವರಿಗೆ ಉಭಯ ನಾಯಕರು ಶುಕ್ರವಾರ ಮನವಿ ಸಲ್ಲಿಸಿದರು.
‘ರಾಜ್ಯಕ್ಕೆ ನಬಾರ್ಡ್ 2023-24ರ ಸಾಲಿನಲ್ಲಿ ₹5,600 ಕೋಟಿಗಳನ್ನು ಮಂಜೂರು ಮಾಡಿತ್ತು.
2024 -25ರ ಸಾಲಿನಲ್ಲಿ ₹2,340 ಕೋಟಿ ನೀಡಿದೆ. ನಬಾರ್ಡ್ ನೆರವು ಪ್ರಸಕ್ತ ಸಾಲಿನಲ್ಲಿ ಶೇ 58 ರಷ್ಟು ಕಡಿತವಾಗಿದೆ. ಇದರಿಂದಾಗಿ, ರಾಜ್ಯದ ರೈತಾಪಿ ವರ್ಗದ ಆರ್ಥಿಕ ವೆಚ್ಚದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅಲ್ಲದೇ, ರಾಜ್ಯದ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರಲಿದೆ. ಹೀಗಾಗಿ, ರಾಜ್ಯದ ರೈತರು ಅಲ್ಪಾವಧಿ ಬೆಳೆ ಸಾಲಗಳನ್ನು ಪಡೆಯಲು ತೊಂದರೆಯಾಗದಂತೆ ಹಣಕಾಸು ಸಚಿವಾಲಯಕ್ಕೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಅವರು ಒತ್ತಾಯಿಸಿದರು.
ರಾಜ್ಯದ ಬೇಡಿಕೆಗಳೇನು?
*ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ಪ್ರಕಟಿಸಿರುವ ₹5,300 ಕೋಟಿಯನ್ನು ಕೂಡಲೇ ಮಂಜೂರು ಮಾಡಬೇಕು.
*ಶುಷ್ಕ ವಲಯಕ್ಕೆ ಸೇರಿದ ಕರ್ನಾಟಕದಂತಹ ರಾಜ್ಯದಲ್ಲಿ ನೀರಾವರಿ ಸೌಲಭ್ಯ ಸಾಮರ್ಥ್ಯಗಳನ್ನು ಸಬಲಗೊಳಿಸುವುದು ಅತ್ಯಗತ್ಯ. ಈ ಕಾರ್ಯವನ್ನು ರಾಜ್ಯವು ತನ್ನ ಸಂಪನ್ಮೂಲಗಳಿಂದಲೇ ಭರಿಸುತ್ತಿದೆ. ಆದರೆ, ಜಲಶಕ್ತಿ ಹಾಗೂ ಅರಣ್ಯ ಸಚಿವಾಲಯಗಳಲ್ಲಿ ವಿವಿಧ ಅನುಮೋದನೆಗಳು ಬಾಕಿ ಇರುವುದರಿಂದ ಯೋಜನೆಗಳು ಅನುಷ್ಠಾನಗೊಳ್ಳುತ್ತಿಲ್ಲ. ಮೇಕೆದಾಟು ಹಾಗೂ ಮಹದಾಯಿ ಯೋಜನೆಗಳಿಗೆ ಜಲಶಕ್ತಿ ಹಾಗೂ ಅರಣ್ಯ ಸಚಿವಾಲಯಗಳಿಂದ ಶೀಘ್ರ ಅನುಮೋದನೆ ಕೊಡಿಸಬೇಕು.
*ಅಮೃತ್ ಯೋಜನೆಯಡಿ ರಾಜ್ಯದ 13 ಮಹಾನಗರ ಪಾಲಿಕೆಗಳಿಗೆ ₹10 ಸಾವಿರ ಕೋಟಿ ಅನುದಾನ ನೀಡಬೇಕು.
*15ನೇ ಹಣಕಾಸು ಆಯೋಗದ ನಿಧಿ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು.
*15ನೇ ಹಣಕಾಸು ಆಯೋಗವು ರಾಜ್ಯಕ್ಕೆ ಅನುದಾನ ಹಂಚಿಕೆ ಕಡಿಮೆಯಾಗಿರುವುದಕ್ಕೆ ಪರಿಹಾರವಾಗಿ ₹5,495 ಕೋಟಿ ಅನುದಾನ ಬಿಡುಗಡೆಗೆ ಶಿಫಾರಸು ಮಾಡಿತ್ತು. ಪೆರಿಫೆರಲ್ ವರ್ತುಲ ರಸ್ತೆ ಮತ್ತು ನೀರಿನ ಮೂಲಗಳ ಪುನರುಜ್ಜೀವನಕ್ಕೆ ₹6 ಸಾವಿರ ಕೋಟಿ ವಿಶೇಷ ಅನುದಾನ ಶಿಫಾರಸು ಮಾಡಿತ್ತು. ಈ ಅನುದಾನಗಳನ್ನು ಬಿಡುಗಡೆ ಮಾಡಲು ನಿರ್ದೇಶನ ನೀಡಬೇಕು.
*16ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನ್ಯಾಯಯುತವಾಗಿ ಅನುದಾನ ಹಂಚಿಕೆ ಮಾಡಬೇಕು.
ಎಚ್‌ಡಿಡಿ ಎಚ್‌ಡಿಕೆ ರಾಜೀನಾಮೆ ನೀಡಲಿ: ಸಿ.ಎಂ ಆಗ್ರಹ
‘ಮಹದಾಯಿ ಮೇಕೆದಾಟು ಯೋಜನೆಗಳ ವಿಷಯದಲ್ಲಿ ರಾಜ್ಯಕ್ಕೆ ನ್ಯಾಯ ಕೊಡಿಸದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಲಿ’ ಎಂದು ಸಿದ್ದರಾಮಯ್ಯ ಆಗ್ರಹಿಸಿದರು. ಪ್ರಧಾನಿ ಭೇಟಿಯ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು ‘ರಾಜ್ಯಕ್ಕೆ ನಿರಂತರ ಅನ್ಯಾಯ ಆಗುತ್ತಿದೆ. ಮಹದಾಯಿ ಮೇಕೆದಾಟು ಯೋಜನೆಗಳಿಗೆ ಅನುಮತಿ ನೀಡುತ್ತಿಲ್ಲ. ಇಷ್ಟಾದರೂ ರಾಜ್ಯದಿಂದ ಆಯ್ಕೆ ಆಗಿರುವ ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ಮಣ್ಣಿನ ಮಗ ಅಂದುಕೊಂಡಿರುವ ಎಚ್.ಡಿ.ಕುಮಾರಸ್ವಾಮಿ ಅವರು ಏನು ಮಾಡುತ್ತಿದ್ದಾರೆ. ರಾಜ್ಯಸಭಾ ಸದಸ್ಯರಾದ ದೇವೇಗೌಡರೂ ರಾಜ್ಯಕ್ಕೆ ಆಗುತ್ತಲೇ ಇರುವ ಅನ್ಯಾಯಗಳ ವಿರುದ್ಧ ಬಾಯಿ ಬಿಡುತ್ತಿಲ್ಲ ಏಕೆ’ ಎಂದು ಪ್ರಶ್ನಿಸಿದರು. ‘ನಬಾರ್ಡ್ ಸಾಲದಲ್ಲಿ ಶೇ58 ರಷ್ಟು ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲ ಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ ನೀಡುತ್ತಿದ್ದ ಸಬ್ಸಿಡಿ ಸಾಲ ಕಡಿತಗೊಳಿಸಿದ್ದರಿಂದ ರಾಜ್ಯದಲ್ಲಿ ಮತ್ತು ದೇಶದಲ್ಲಿ ಆಹಾರ ಉತ್ಪಾದನೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.