ADVERTISEMENT

ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಯೇ ಅಲ್ಲಾಡುತ್ತಿದೆ: ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಡಿಸೆಂಬರ್ 2020, 12:14 IST
Last Updated 31 ಡಿಸೆಂಬರ್ 2020, 12:14 IST
ಮಾಜಿ ಸಿಎಂ ಸಿದ್ಧರಾಮಯ್ಯ
ಮಾಜಿ ಸಿಎಂ ಸಿದ್ಧರಾಮಯ್ಯ   

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಿಎಂ ಕುರ್ಚಿಯೇ ಅಲ್ಲಾಡುತ್ತಿದೆ. ಅದರ ನಡುವೆಯೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಹಗಲು ಕನಸು ಕಾಣ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯ ವಿವರಗಳನ್ನು ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ ಎಂದು ಹೇಳಿದರು.

ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ 60% ಪಂಚಾಯಿತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯಿತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ ಎಂದು ಹೇಳಿದರು.

ADVERTISEMENT

ಇನ್ನೂ ಹಲವು ಜಿಲ್ಲೆಗಳಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡು ಫಲಿತಾಂಶ ಹೊರಬಂದಿಲ್ಲ. ಮೀಸಲಾತಿ ಅಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಹಂಚಿಕೆಯಾಗಿಲ್ಲ. ಆಗಲೇ ಯಡಿಯೂರಪ್ಪ ಅವರು ನಮ್ಮ ಪಕ್ಷ 3800ಕ್ಕೂ ಅಧಿಕ ಪಂಚಾಯಿತಿಗಳಲ್ಲಿ ಗೆದ್ದಿದೆ ಎಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದು ಟೀಕೆ ಮಾಡಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳೆನ್ನದೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತ ನೀಡಿ, ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದರು.

ಗ್ರಾಮಗಳ ಪ್ರಗತಿಯಲ್ಲಿ ದೇಶದ ಉನ್ನತಿ ಅಡಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ಗ್ರಾಮವನ್ನು ಸದೃಢಗೊಳಿಸುವ ಕಾರ್ಯದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕೆಂಬುದು ನನ್ನ ಸಲಹೆ ಎಂದು ಸಿದ್ಧರಾಮಯ್ಯ ತಿಳಿಸಿದರು.

ಈ ಮಧ್ಯೆ ರೂಪಾಂತರಿ ಕೊರೊನಾ ವೈರಸ್ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು. ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರನ್ನು ವಿಮಾನ ನಿಲ್ದಾಣದಲ್ಲಿ ಸೂಕ್ತ ಪರೀಕ್ಷೆಗೆ ಒಳಪಡಿಸದಿರುವುದು ದೊಡ್ಡ ತಪ್ಪು. ಈಗ ಬ್ರಿಟನ್‌ನಿಂದ ಬಂದವರು ತಲೆಮರೆಸಿಕೊಂಡಿದ್ದಾರೆ. ಪ್ರಯಾಣಿಕರ ವಿಳಾಸ ಸಿಗ್ತಿಲ್ಲ ಅಂದರೆ ಅದು ಸರ್ಕಾರದ ಬೇಜವಾಬ್ದಾರಿಯನ್ನು ತೋರಿಸುತ್ತೆ. ಸರ್ಕಾರ ಕಳೆದ ಬಾರಿ ಮಾಡಿದ್ದ ತಪ್ಪನ್ನೆ ಮತ್ತೆ ಮಾಡುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.