ADVERTISEMENT

ಕಾಂಗ್ರೆಸ್‌ 'ಜನಧ್ವನಿ' ಜಾಥಾಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 6:02 IST
Last Updated 3 ಮಾರ್ಚ್ 2021, 6:02 IST
ಕಾಂಗ್ರೆಸ್‌ 'ಜನಧ್ವನಿ' ಜಾಥಾ
ಕಾಂಗ್ರೆಸ್‌ 'ಜನಧ್ವನಿ' ಜಾಥಾ   

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಾಭಿಪ್ರಾಯ ರೂಪಿಸಿ, ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಮುಂದಾಗಿರುವ ಕೆಪಿಸಿಸಿ, ಪಕ್ಷದ ಶಾಸಕರು ಇಲ್ಲದ ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರದಿಂದ (ಮಾರ್ಚ್‌ 3) 'ಜನಧ್ವನಿ' ಜಾಥಾ ಹಮ್ಮಿಕೊಂಡಿದೆ.

ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಬುಧವಾರ ಮೊದಲ ಜಾಥಾ ನಡೆಯಲಿದ್ದು, ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಮುಂಭಾಗದಲ್ಲಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಈ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಈಶ್ವರ ಖಂಡ್ತೆ, ರಾಮಲಿಂಗಾರೆಡ್ಡಿ, ಧ್ರುವನಾರಾಯಣ್ ಇದ್ದರು.

ಬಳಿಕ ವಿಶೇಷ ವಾಹನದಲ್ಲಿ ಕಾಂಗ್ರೆಸ್ ನಾಯಕರು ದೇವನಹಳ್ಳಿಗೆ ಪ್ರಯಾಣ ಬೆಳೆಸಿದರು. ಅಲ್ಲಿ ಮೆರವಣಿಗೆ ಮೂಲಕ ಜನನಿಬಿಡ ಪ್ರದೇಶದಲ್ಲಿ ಸಾಗಿ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ಕುರಿತು ಮನವರಿಕೆ ಮಾಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ತೆರಳಿ ಅಲ್ಲಿ ಜನಜಾಗೃತಿ ಜಾಥಾ ಕೈಗೊಳ್ಳಲಿದ್ದಾರೆ.

ADVERTISEMENT

ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಲು ಡೊಳ್ಳು ಕುಣಿತ ಸೇರಿದಂತೆ ಹಲವು ಜನಪದ ಕಲೆಗಳ ಪ್ರದರ್ಶನ ನೀಡಲಾಗುತ್ತಿದೆ. ಜನರನ್ನು ತಮ್ಮತ್ತ ಸೆಳೆಯುವ ಜೊತೆಗೆ ಮುಂದಿನ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರಲೇಬೇಕೆಂಬ ಪಣ ತೊಟ್ಟು ರಾಜ್ಯದಾದ್ಯಂತ ಕಾಂಗ್ರೆಸ್ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.