ADVERTISEMENT

ಕರ್ನಾಟಕವನ್ನು ಭ್ರಷ್ಟಾಚಾರದಲ್ಲಿ ನಂ1 ಸ್ಥಾನಕ್ಕೇರಿಸಿದ ಕಾಂಗ್ರೆಸ್ ಸರ್ಕಾರ: ಅಶೋಕ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 5:21 IST
Last Updated 20 ಜೂನ್ 2025, 5:21 IST
ಆರ್. ಅಶೋಕ 
ಆರ್. ಅಶೋಕ    

ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಲಂಚ ನೀಡಿದವರಿಗಷ್ಟೇ ಮನೆಗಳನ್ನು ಮಂಜೂರು ಮಾಡಿರುವ ಕುರಿತು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರೂ ಆಗಿರುವ ಆಳಂದ ಶಾಸಕ ಬಿ.ಆರ್. ಪಾಟೀಲ ತಮ್ಮದೇ ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ  ಕಾಂಗ್ರೆಸ್ ಸರ್ಕಾರ ಭ್ರಷ್ಟ ಸರ್ಕಾರ ಎಂದು ಕಿಡಿಕಾರಿದ್ದಾರೆ. 

ಈ ಕುರಿತು ‘ಪ್ರಜಾವಾಣಿ’ ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ  ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ ಜಮೀರ್ ಅಹಮದ್‌ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ’.

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಶಾಸಕ ಬಿ.ಆರ್. ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗಪಡಿಸಬೇಕು, ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ಆಗ್ರಹಿಸುತ್ತೇನೆ. ಅವರಿಗೆ ಈ ವಿಷಯದಲ್ಲಿ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದಿದ್ದಾರೆ.

ADVERTISEMENT

ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಸಿಎಂ ಸಿದ್ದರಾಮಯ್ಯನವರೇ, ಈ ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.