
ಡಿಕೆಶಿ
ಬೆಂಗಳೂರು: ‘ಪದವೀಧರ ಮತ್ತು ಶಿಕ್ಷಕರ ತಲಾ ಎರಡು ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಮುಂದಿನ 8-10 ದಿನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯ ಭಾರತ ಜೋಡೊ ಸಭಾಂಗಣದಲ್ಲಿ ಪಶ್ಚಿಮ ಮತ್ತು ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಈಶಾನ್ಯ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಬಳಿಕ ಅವರು ಈ ವಿಷಯ ತಿಳಿಸಿದರು.
‘ಈ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸನ್ನದ್ಧಗೊಳಿಸಲು ಸಭೆ ನಡೆಸಿದ್ದೇವೆ. ಕಾರ್ಯಕರ್ತರು ಹಾಗೂ ಟಿಕೆಟ್ ಆಕಾಂಕ್ಷಿಗಳ ಜೊತೆ ಚರ್ಚಿಸಿದ ನಂತರ ಹೈಕಮಾಂಡ್‌ಗೆ ಹೆಸರುಗಳನ್ನು ಶಿಫಾರಸು ಮಾಡಲಾಗುವುದು’ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಸಚಿವರಾದ ಎನ್.ಎಸ್. ಬೋಸರಾಜು, ರಹೀಂ ಖಾನ್, ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಜಿ. ಕುಮಾರ್ ನಾಯಕ್, ಸಾಗರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.