ADVERTISEMENT

ಪಿಯು ಪರೀಕ್ಷೆಗೆ ಕೊರೊನಾ ಸೋಂಕಿತೆ ಹಾಜರಾಗಿಲ್ಲ: ಸಚಿವ ಸುರೇಶ್‍ ಕುಮಾರ್

​ಪ್ರಜಾವಾಣಿ ವಾರ್ತೆ
Published 20 ಜೂನ್ 2020, 12:34 IST
Last Updated 20 ಜೂನ್ 2020, 12:34 IST
ಎಸ್‌. ಸುರೇಶ್‌ ಕುಮಾರ್
ಎಸ್‌. ಸುರೇಶ್‌ ಕುಮಾರ್   

ಬೆಂಗಳೂರು: ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಬೆಂಗಳೂರಿನ ಜಯನಗರದ ಬಿಇಎಸ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರನ್ನು ಅಳಿಸಿಕೊಂಡು ಹಾಜರಾಗಿದ್ದಾಳೆಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಹೇಳಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್, ಈ ವಿದ್ಯಾರ್ಥಿನಿಯ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, ವರದಿ ‘ನೆಗೆಟಿವ್’ ಎಂಬುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿಯೊಬ್ಬಳು ಕ್ವಾರಂಟೈನ್ ಮೊಹರು ಅಳಿಸಿ ಪರೀಕ್ಷೆಗೆ ಹಾಜರಾಗಿದ್ದಾಳೆಂಬ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿದ್ಯಾರ್ಥಿನಿಯ ಕೊರೋನಾ ಟೆಸ್ಟ್ ಮಾಡಿಸಲಾಗಿದ್ದು, ಇಂದು ಮಧ್ಯಾಹ್ನ 2.54ಕ್ಕೆ ವರದಿಯನ್ನೂ ಪಡೆಯಲಾಗಿದೆ. ಈ ವರದಿಯಲ್ಲಿ ‘ಕೊರೋನಾ ನೆಗೆಟಿವ್’ ಎಂಬುದು ದೃಢಪಟ್ಟಿದೆ. ಹಾಗಾಗಿ ಆಕೆ ಪರೀಕ್ಷೆ ಬರೆದ ಕೊಠಡಿಯಲ್ಲಿ ಹಾಜರಿದ್ದ ಯಾವುದೇ ಪರೀಕ್ಷಾರ್ಥಿಗಳು ಭಯಪಡಬೇಕಾದ ಅಗತ್ಯವಿಲ್ಲ, ಯಾವುದೇ ವಿದ್ಯಾರ್ಥಿ ಕ್ವಾರಂಟೈನ್‍ಗೆ ಒಳಗಾಗಬೇಕಾದ ಅಗತ್ಯವೂ ಇಲ್ಲ ಎಂದು ತಿಳಿಸಿದರು.

ಆ ವಿದ್ಯಾರ್ಥಿನಿಯೂ ಸಹ ಆರೋಗ್ಯದ ದೃಷ್ಟಿಯಿಂದ ಸುರಕ್ಷಿತವಾಗಿದ್ದಾಳೆ. ಆಕೆಯ ತಂದೆ ಈಗಾಗಲೇ ಕ್ವಾರಂಟೈನ್‍ನಲ್ಲಿದ್ದು, ಆರೋಗ್ಯ ಇಲಾಖೆಯ ನಿಗಾದಲ್ಲಿ ಸೂಕ್ತ ಚಿಕಿತ್ಸೆಗೊಳಗಾಗಿದ್ದಾರೆ. ಅವರೂ ಸಹ ಯಾವುದೇ ಆರೋಗ್ಯದ ತೊಂದರೆಗೆ ಒಳಗಾಗಿಲ್ಲ ಎಂದು ಸುರೇಶ್ ಕುಮಾರ್ ತಿಳಿಸಿದರು.

ADVERTISEMENT

ಜೂನ್ 18ರಂದು ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯ ಬಳಿಕ; ಬೆಂಗಳೂರಿನ ಜಯನಗರದ ಕಾಲೇಜೊಂದರಲ್ಲಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯೊಬ್ಬಳಿಗೆ ಕೊರೋನಾ ಸೋಂಕು ತಗುಲಿದ್ದು, ಈ ವಿದ್ಯಾರ್ಥಿ ಕ್ವಾರಂಟೈನ್ ಮೊಹರು ಅಳಿಸಿಕೊಂಡು ಪರೀಕ್ಷೆಗೆ ಹಾಜರಾಗಿದ್ದಾಳೆಂದು ದೃಶ್ಯ ಮತ್ತು ಕೆಲವು ಮುದ್ರಣ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಸೇರಿದಂತೆ ಯಾವ ಇಲಾಖೆ ನಿಖರ ಮಾಹಿತಿಯನ್ನು ನೀಡುತ್ತಿಲ್ಲವೆಂದು ಮೊಹರು ಅಳಿಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿನಿಯನ್ನು ತಪ್ಪಿತಸ್ಥಳೆಂದು ಬಿಂಬಿಸಿ ಇಡೀ ಪ್ರಕರಣವನ್ನು ಗೋಜಲುಗೊಳಿಸಿ ವಿಶ್ವಾಸ ಕದಡುವ ಪ್ರಯತ್ನ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಇಡೀ ರಾಜ್ಯದಲ್ಲಿ ಪರೀಕ್ಷೆ ಬರೆದ 6 ಲಕ್ಷ ವಿದ್ಯಾರ್ಥಿಗಳ ಹಿತವನ್ನು ಕಾಯ್ದ ಶಿಕ್ಷಣ ಇಲಾಖೆಗೆ ಈ ವಿದ್ಯಾರ್ಥಿನಿಯೋರ್ವಳನ್ನು ಪರೀಕ್ಷಿಸದೇ ಬೇರೊಬ್ಬರಿಗೆ ತೊಂದರೆ ಉಂಟು ಮಾಡುವಂತಹ ಯಾವುದೇ ಉದ್ದೇಶವಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯೂ ನಮ್ಮ ಶಿಕ್ಷಣ ಇಲಾಖೆಯ ಆಸ್ತಿಯಾಗಿದ್ದು, ಅವರ ಹಿತವೇ ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಸಚಿವರು ಹೇಳಿದರು.

ಜೂನ್ 18ರಂದು ಇಂಗ್ಲಿಷ್ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಸುಮಾರು ಆರು ಲಕ್ಷ ವಿದ್ಯಾರ್ಥಿಗಳು ಅತ್ಯಂತ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆದಿದ್ದಾರೆ. ಶಿಕ್ಷಣ ಇಲಾಖೆಯೊಂದಿಗೆ ಆರೋಗ್ಯ, ಸಾರಿಗೆ, ಗೃಹ ಇಲಾಖೆಗಳು ಸೇರಿದಂತೆ ರಾಜ್ಯದಲ್ಲಿ ಆಯಾ ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆದಿವೆ. ಎಲ್ಲಕ್ಕಿಂತ ಹೆಚ್ಚಾಗಿ ವಿದ್ಯಾರ್ಥಿಗಳ ಹಿತರಕ್ಷಣೆಯೇ ನಮ್ಮ ಮೊದಲ ಆದ್ಯತೆಯಾದ್ದರಿಂದ ಮಕ್ಕಳ ಸುರಕ್ಷತೆ ಹೆಚ್ಚು ಒತ್ತು ನೀಡಲಾಗಿದ್ದು, ಈ ಸಂಬಂಧಲ್ಲಿ ಮಕ್ಕಳನ್ನು ಮನೆಯಿಂದ ಪರೀಕ್ಷಾ ಕೇಂದ್ರ ಹಾಗೆಯೇ ಪರೀಕ್ಷಾ ಕೇಂದ್ರದಿಂದ ಮನೆಯವರೆಗೂ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಕರೆತರಲಾಗಿತ್ತು ಎಂದು ಸಚಿವರು ವಿವರಿಸಿದರು.

ರಾಜ್ಯದ 1,016 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿವೆ. ಜಿಲ್ಲಾ ಕೇಂದ್ರದ 430, ತಾಲೂಕು ಕೇಂದ್ರಗಳಲ್ಲಿನ 328 ಮತ್ತು ಹೋಬಳಿ ಕೇಂದ್ರಗಳ 258 ಪರೀಕ್ಷಾ ಕೇಂದ್ರಗಳನ್ನು ಸೃಜಿಸಲಾಗಿತ್ತು. ಈ ಪರೀಕ್ಷಾ ಕೇಂದ್ರಗಳಲ್ಲಿ 23,064 ಕೊಠಡಿಗಳನ್ನು ಮುಂಚೆ ಪರೀಕ್ಷೆಯನ್ನು ನಿರ್ವಹಿಸಲು ಗುರುತಿಸಿಕೊಳ್ಳಲಾಗಿತ್ತು. ಸಾಮಾಜಿಕ ಅಂತರ ಕಾಪಾಡುವ ಉದ್ದೇಶದಿಂದ ಹೆಚ್ಚುವರಿಯಾಗಿ 13,528 ಕೊಠಡಿಗಳನ್ನು ಸೇರ್ಪಡೆ ಮಾಡಿ 36,592 ಕೊಠಡಿಗಳನ್ನು ಬಳಸಿಕೊಂಡು ಪರೀಕ್ಷೆಗಳನ್ನು ನಿರ್ವಹಿಸಲಾಗಿದೆ ಎಂದು ಸುರೇಶ್‍ಕುಮಾರ್ ತಿಳಿಸಿದರು.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯ ಉಷ್ಣಾಂಶ ಪರೀಕ್ಷೆಯನ್ನು ನಡೆಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿದೆ. ಇಡೀ ರಾಜ್ಯದಲ್ಲಿ ಪರೀಕ್ಷಾ ಸಂದರ್ಭದಂದು ಜ್ವರ, ನೆಗಡಿಯಂತಹ ಅನಾರೋಗ್ಯಕ್ಕೆ ಒಳಗಾದ 20 ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತ್ಯೇಕ ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿತ್ತು. ಅದೇ ರೀತಿ ರಾಜ್ಯದಾದ್ಯಂತ ಒಟ್ಟು 223 ವಿದ್ಯಾರ್ಥಿಗಳು ಕಂಟೈನ್‍ಮೆಂಟ್ ವಲಯಗಳಿಂದ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಅವರು ತಿಳಿಸಿದರು.

ಅಂತರವನ್ನು ಕಾಯ್ದುಕೊಳ್ಳಬೇಕೆಂದು ಸ್ಪಷ್ಟ ನಿರ್ದೇಶನಗಳನ್ನು ಪರೀಕ್ಷಾ ಪೂರ್ವದಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರುಗಳಿಗೆ ನೀಡಲಾಗಿದ್ದು, ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಅಂತರವನ್ನು ಕಾಯ್ದುಕೊಳ್ಳದೇ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದೊಳಕ್ಕೆ ಪ್ರವೇಶಿಸಲು ಅನುಮತಿ ನೀಡಿರುವುದನ್ನು ಮಾಧ್ಯಮಗಳ ಮೂಲಕ ಗಮನಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಈಗಾಗಲೇ ಸೂಚನೆ ನೀಡಿದ್ದೇನೆ. ಅದೇ ರೀತಿ ಇಂಗ್ಲಿಷ್ ಭಾಷಾ ಪರೀಕ್ಷೆಯ ದಿನದಂದು ಕಂಡುಬಂದ ನ್ಯೂನತೆಗಳನ್ನು ಅವಕಾಶಗಳನ್ನಾಗಿ ಬಳಸಿಕೊಂದು ಜೂನ್ 25ರಿಂದ ಆರಂಭವಾಗಲಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಲ್ಲಿ ಈ ರೀತಿಯ ಯಾವುದೇ ಸಮಸ್ಯೆಗಳು ಎದುರಾಗದ ರೀತಿಯಲ್ಲಿ ಎಲ್ಲ ಕ್ರಮಗಳನ್ನೂ ಅನುಸರಿಸಲು ಈಗಾಗಲೇ ಇಲಾಖಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದೂ ಸುರೇಶ್‍ಕುಮಾರ್ ತಿಳಿಸಿದರು.


ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿರುವ ಯಾವುದೇ ವಿದ್ಯಾರ್ಥಿಯ ಪೋಷಕರು, ಜೊತೆಯಲ್ಲಿ ವಾಸಿಸುವ ಹತ್ತಿರದ ಸಂಬಂಧಿಕರು ಕೊರೋನಾ ಹಿನ್ನೆಲೆಯಲ್ಲಿ ಕ್ವಾರಂಟೈನ್‍ಗೆ ಒಳಗಾಗಿದ್ದಲ್ಲಿ ಅಂತಹ ಪ್ರಕರಣಗಳನ್ನು ಪೂರ್ವಭಾವಿಯಾಗಿ ಪತ್ತೆ ಹಚ್ಚಿ ನಮ್ಮ ಇಲಾಖೆಯ ದಾಖಲೆ/ದತ್ತಾಂಶಗಳೊಂದಿಗೆ ತಾಳೆ ಮಾಡಿ ಅಂತಹ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆಗೆ ಹಾಜರಾಗಲು ವಿನಾಯ್ತಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿರುತ್ತೇನೆ. ಜೊತೆಗೆ ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ನಡೆಯುವ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ದೊರಕಿಸುವಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ವಿವರಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ನ್ಯಾಯಾಲಯಗಳ ಆದೇಶದಂತೆ ನಡೆಯಲಿವೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ 200 ಮಕ್ಕಳಿಗೆ ಒಂದರಂತೆ ಆರೋಗ್ಯ ತಪಾಸಣಾ ಕೇಂದ್ರಗಳನ್ನು ಪರೀಕ್ಷಾ ಕೇಂದ್ರದ ಮುಖ್ಯದ್ವಾರದಲ್ಲಿ ಸ್ಥಾಪಿಸಲಾಗುತ್ತದೆ. ಪ್ರತಿ ವಿದ್ಯಾರ್ಥಿ ತಲಾ 2 ಮಾಸ್ಕ್‍ಗಳನ್ನು ಪಡೆಯಲಿದ್ದಾರೆ. ಪ್ರತಿ ತಾಲೂಕಿನ ಕೇಂದ್ರ ಸ್ಥಾನ ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕನಿಷ್ಠ 2 ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ ಕಾಯ್ದಿರಿಸಿದ ಪರೀಕ್ಷಾ ಕೇಂದ್ರಗಳಾಗಿ ಜಾರಿಯಲ್ಲಿಡಲಾಗುತ್ತದೆ ಎಂದು ವಿವರಿಸಿದ ಸಚಿವರು, ಈಗಾಗಲೇ ಹೇಳಿದಂತೆ ರಾಜ್ಯದ ವಿವಿಧ ಇಲಾಖೆಗಳು ಸಂಪೂರ್ಣ ಸಮನ್ವಯದೊಂದಿಗೆ ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಮಾಜಕ್ಕೆ ಒಂದು ಭರವಸೆ ನೀಡುವ ನಿಟ್ಟಿನಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ನಿರ್ವಹಿಲಿವೆ. ಈ ಬಗ್ಗೆ ಯಾವ ಅಪನಂಬಿಕೆಯೂ ಬೇಡ ಎಂದು ತಿಳಿಸಿದರು.

ಮಾಧ್ಯಮಗಳಲ್ಲಿ ಮನವಿ: ಇಂತಹ ಅತ್ಯಂತ ಸೂಕ್ಷ್ಮ ಹಾಗೂ ಬಿಕ್ಕಟ್ಟಿನ ಸಂದರ್ಭದಲ್ಲಿ ಬಹಳ ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕಾಗಿದೆ. ನಾವು ನೀವೆಲ್ಲರೂ ಸೇರಿ ಸ್ವಸ್ಥ ಸಮಾಜವನ್ನು ನಿರ್ಮಿಸುವ ಕೆಲಸ ಮಾಡಬೇಕಾಗಿರುತ್ತದೆ. ಈ ಮೂಲಕ ಸಮಾಜಕ್ಕೆ ಒಂದು ಸಕಾರಾತ್ಮಕ ಸಂದೇಶ ನೀಡಬೇಕಾಗಿದೆ ಎಂದು ಸುರೇಶ್‍ಕುಮಾರ್ ಮಾಧ್ಯಮಗಳನ್ನು ವಿನಂತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.