ಸಿದ್ದರಾಮಯ್ಯ
–ಪ್ರಜಾವಾಣಿ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಉಂಟಾಗಿದ್ದು, ಕೇಂದ್ರ ಸರ್ಕಾರ ಹಂಚಿಕೆ ಮಾಡಿದ ಪ್ರಕಾರ ಯೂರಿಯಾ ಗೊಬ್ಬರ ಪೂರೈಸಲು ಕೆಲವು ರಸಗೊಬ್ಬರ ಕಂಪನಿಗಳು ಮುಂದೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಕೇಂದ್ರ ರಸಗೊಬ್ಬರ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ, ‘ಕೇಂದ್ರ ಸರ್ಕಾರ 2025ರ ಮುಂಗಾರು ಬೆಳೆಗೆ ರಾಜ್ಯಕ್ಕೆ 11.17 ಲಕ್ಷ ಟನ್ ಯೂರಿಯಾ ಹಂಚಿಕೆ ಮಾಡಿದೆ. ಈವರೆಗೆ ಕೇವಲ 5,16,959 ಟನ್ ರಸಗೊಬ್ಬರ ಪೂರೈಕೆ ಆಗಿದೆ. ಯೂರಿಯಾ ಕೊರತೆಯು ರೈತರಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ’ ಎಂದಿದ್ದಾರೆ.
‘ಏಪ್ರಿಲ್‍ನಿಂದ ಜುಲೈವರೆಗೆ ರಾಜ್ಯಕ್ಕೆ 6,80,655 ಟನ್ ಯೂರಿಯಾದ ಅವಶ್ಯ ಇದೆ. ಕೊರತೆ ಆಗಿರುವ 1,65,541 ಟನ್ ಯೂರಿಯಾ ಪೂರೈಕೆಯನ್ನು ತ್ವರಿತಗೊಳಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಯೂರಿಯಾ ಪೂರೈಕೆಯ ತುರ್ತು ಅವಶ್ಯವಿದೆ. ಏಕೆಂದರೆ ಕರ್ನಾಟಕಕ್ಕೆ ಈ ವರ್ಷದ ಆರಂಭದಲ್ಲಿಯೇ ಮುಂಗಾರು ಪ್ರವೇಶ ಮಾಡಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ವಿವಿಧ ಬೆಳೆಗಳ ವ್ಯಾಪ್ತಿ ಹೆಚ್ಚಾಗಿದೆ. ತುಂಗಭದ್ರಾ, ಕಾವೇರಿ ಮತ್ತು ಕೃಷ್ಣಾ ನದಿಗಳ ಆಯಕಟ್ಟಿನ ಪ್ರದೇಶಗಳಲ್ಲಿ ನೀರನ್ನು ಮೊದಲೇ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಗಮನ ಸೆಳೆದಿದ್ದಾರೆ.
‘ಹೆಚ್ಚಿನ ಗೊಬ್ಬರ ಬಳಸುವ ಬೆಳೆಯಾದ ಮೆಕ್ಕೆಜೋಳದ ವಿಸ್ತೀರ್ಣವು ಸುಮಾರು 2 ಲಕ್ಷ ಹೆಕ್ಟೇರ್‌ನಷ್ಟು ಹೆಚ್ಚಾಗಿದೆ. ದ್ವಿದಳ ಧಾನ್ಯಗಳ ವಿಸ್ತೀರ್ಣವು ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಡಿಮೆ ಆಗಿದೆ’ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.