ADVERTISEMENT

ಕರ್ನಾಟಕ ಜಾನಪದ ವಿ.ವಿ ಕುಲಪತಿ ಪತ್ನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2022, 5:46 IST
Last Updated 19 ಜುಲೈ 2022, 5:46 IST
   

ಬೆಂಗಳೂರು: ಹಾವೇರಿ ಜಿಲ್ಲೆಯ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ (ಪ್ರಭಾರ) ಪ್ರೊ. ಸಿ.ಟಿ. ಗುರುಪ್ರಸಾದ್ ಅವರ ಪತ್ನಿ ಎಚ್‌.ಕೆ. ಚೈತ್ರಾ (41) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಜ್ಞಾನಭಾರತಿ ಠಾಣೆಯಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಾಗಿದೆ.

‘ಜ್ಞಾನಭಾರತಿ ಬಳಿಯ ಕದಂಬ ಬಡಾವಣೆ ನಿವಾಸಿ ಚೈತ್ರಾ ಅವರು ಸೋಮವಾರ ಬೆಳಿಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಸಹೋದರ ಡಾ. ಶರತ್‌ ಬಾಬು ದೂರು ನೀಡಿದ್ದಾರೆ. ಯುಡಿಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದರು. ‘ಚೈತ್ರಾ, ಗುರುಪ್ರಸಾದ್, 23 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕದಂಬ ಬಡಾವಣೆಯಲ್ಲಿ ಕುಟುಂಬ ವಾಸವಿತ್ತು. ಕೆಲಸದ ನಿಮಿತ್ತ ಗುರುಪ್ರಸಾದ್ ಹಾವೇರಿಯಲ್ಲಿ ನೆಲೆಸಿದ್ದರು’ ಎಂದು ಹೇಳಿದರು.

ಮರಣಪತ್ರ ಪತ್ತೆ: ‘ಚೈತ್ರಾ ಅವರುಬರೆದಿದ್ದಾರೆ ಎನ್ನಲಾದ ಮರಣಪತ್ರ ಪತ್ತೆಯಾಗಿದೆ. ‘ನನ್ನ ಆರೋಗ್ಯ ಸರಿ ಇಲ್ಲದಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ’ ಎಂದು ಅದರಲ್ಲಿ ಬರೆಯಲಾಗಿದ್ದು, ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ADVERTISEMENT

‘ಚೈತ್ರಾ ಅವರಿಗೆ ಎರಡು ತಿಂಗಳಿನಿಂದ ಆರೋಗ್ಯ ಸರಿ ಇರಲಿಲ್ಲ. ಮನೆಯಲ್ಲಿ ಒಬ್ಬರೇ ಇರುತ್ತಿದ್ದರೆಂದು ಸಹೋದರ ದೂರಿನಲ್ಲಿ ತಿಳಿಸಿದ್ದಾರೆ. ಇದು ಆತ್ಮಹತ್ಯೆಯಷ್ಟೇ ಎಂದಿರುವ ಸಹೋದರ, ಸಾವಿನಲ್ಲಿ ಯಾವುದೇ ಅನುಮಾನವಿಲ್ಲವೆಂದು ಸಹ ಹೇಳಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.