ADVERTISEMENT

ಜನೌಷಧಿ ಮೇಲ್ಮನವಿ: ಪಿಎಂಬಿಐಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 16:02 IST
Last Updated 29 ಜನವರಿ 2026, 16:02 IST
   

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಆದೇಶ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದೆ.

ಈ ಸಂಬಂಧ ರಾಜ್ಯ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಲಿಸಿದ್ದ ರಿಟ್‌ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಔಷಧಿಗಳು ಸಂಪೂರ್ಣ ಉಚಿತವಾಗಿ ಸಿಗಬೇಕೆಂಬುದೇ ಸರ್ಕಾರದ ನೀತಿ. ಹಾಗಾಗಿಯೇ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಸರ್ಕಾರ ನಿರ್ಧರಿಸಿತ್ತು. ಇದೊಂದು ಸರ್ಕಾರದ ನೀತಿ ನಿರ್ಣಯದ ವಿಚಾರವಾಗಿದೆ’ ಎಂದರು.

ADVERTISEMENT

‘ರಾಜ್ಯದಲ್ಲಿ ಒಟ್ಟು 1,200ಕ್ಕೂ ಹೆಚ್ಚು ಜನೌಷಧಿ ಕೇಂದ್ರಗಳಿವೆ. ಈ ಪೈಕಿ 187 ಕೇಂದ್ರಗಳು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿದ್ದು, ಅವುಗಳನ್ನು ಮಾತ್ರ ಮುಚ್ಚಲಾಗಿದೆ. ಅದರಲ್ಲೂ ರಾಜ್ಯ ಸರ್ಕಾರವೇ ನಡೆಸುತ್ತಿದ್ದ 61 ಕೇಂದ್ರಗಳನ್ನೂ ಮುಚ್ಚಲಾಗಿದೆ. ಉಳಿದ 126 ಕೇಂದ್ರಗಳ ಪರವಾನಗಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. 2018ರಿಂದ 2021ರವರೆಗೆ ಮೂರು ವರ್ಷದ ಅವಧಿಗೆ ಮಾತ್ರ ಪರವಾನಿಗೆ ನೀಡಲಾಗಿತ್ತು’ ಎಂಬ ಅಂಶವನ್ನು ಶಶಿಕಿರಣ ಶೆ‌ಟ್ಟಿ ನ್ಯಾಯಪೀಠದ ಗಮನಕ್ಕೆ ತಂದರು.

‘ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರು ಪ್ರಧಾನಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ರಿಟ್ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಮೇಲ್ಮನವಿ ವಿಚಾರಣೆಯಲ್ಲಿ ಈ ಎಲ್ಲಾ ಪೀಠಗಳಲ್ಲಿನ ಅರ್ಜಿಗಳನ್ನು ಒಟ್ಟಿಗೇ ಒಂದೇ ನ್ಯಾಯಪೀಠದಲ್ಲಿ ವಿಚಾರಣೆ ನಡೆಸುವಂತಾದರೆ ಸೂಕ್ತವಾಗಲಿದೆ’ ಎಂದು ವಿವರಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಎಲ್ಲಾ ಅರ್ಜಿಗಳನ್ನು ಒಂದೇ ನ್ಯಾಯಪೀಠದ ಮುಂದೆ ಪರಿಗಣಿಸಲು ಆಡಳಿತ ವಿಭಾಗಕ್ಕೆ ಸೂಚಿಸಿತು.

ಪ್ರತಿವಾದಿಗಳಾದ ‘ಭಾರತೀಯ ಔಷಧ ಮತ್ತು ವೈದ್ಯಕೀಯ ಸಾಧನಗಳ ಬ್ಯೂರೊ‘ (ಪಿಎಂಬಿಐ) ಹಾಗೂ ಜನೌಷಧಿ ಕೇಂದ್ರದ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಫೆಬ್ರುವರಿ 4ಕ್ಕೆ ಮುಂದೂಡಿತು.

ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣಗಳಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಸಂಬಂಧ 2025ರ ಮೇ 14ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಹಲವು ಜನೌಷಧಿ ಕೇಂದ್ರಗಳ ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಸರ್ಕಾರದ ಆದೇಶವನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ 2025ರ ಡಿಸೆಂಬರ್ 19ರಂದು ಆದೇಶ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.