ಎಚ್.ಡಿ. ದೇವೇಗೌಡ
ನವದೆಹಲಿ: ಕರ್ನಾಟಕದ ವಿಶ್ವವಿದ್ಯಾಲಯಗಳ ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗೆ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ದುಡ್ಡಿಲ್ಲ. ಈ ವಿಶ್ವವಿದ್ಯಾಲಯಗಳು ಮರಣಶಯ್ಯೆಯಲ್ಲಿವೆ ಎಂದು ರಾಜ್ಯಸಭೆಯ ಜೆಡಿಎಸ್ ಸದಸ್ಯ ಎಚ್.ಡಿ.ದೇವೇಗೌಡ ಕಳವಳ ವ್ಯಕ್ತಪಡಿಸಿದರು.
ರಾಜ್ಯಸಭೆಯಲ್ಲಿ ಮಂಗಳವಾರ ನಡೆದ ಶಿಕ್ಷಣ ಸಚಿವಾಲಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ವಿಶ್ವವಿದ್ಯಾಲಯಗಳು ಸ್ಥಿತಿ ದಯನೀಯವಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯ ಕೂಡಲೇ ಮಧ್ಯಪ್ರವೇಶಿಸಿ ಅನುದಾನ ಬಿಡುಗಡೆ ಮಾಡಬೇಕು. ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ’ ಎಂದು ಸಲಹೆ ನೀಡಿದರು.
‘ಮೈಸೂರು ವಿಶ್ವವಿದ್ಯಾಲಯವು ದೇಶದ ಹಳೆಯ ವಿಶ್ವವಿದ್ಯಾಲಯಗಳಲ್ಲಿ ಒಂದು. ಶತಮಾನೋತ್ಸವ ಆಚರಿಸಿರುವ ವಿ.ವಿಯು ಸಂಕಷ್ಟದ ಸ್ಥಿತಿಯಲ್ಲಿದೆ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಉಪನ್ಯಾಸಕರು ಹಾಗೂ ಸಿಬ್ಬಂದಿಗೆ ಕೆಲವು ತಿಂಗಳಿಂದ ಸರಿಯಾಗಿ ವೇತನ ಪಾವತಿ ಆಗಿಲ್ಲ’ ಎಂದು ಗಮನ ಸೆಳೆದರು.
ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಸೇರಿದಂತೆ ಹೆಚ್ಚಿನ ರಾಜ್ಯಗಳಲ್ಲಿ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ ವಿವಾದಕ್ಕೆ ಕಾರಣವಾಗುತ್ತಿದೆ. ಕೇಂದ್ರ ಶಿಕ್ಷಣ ಸಚಿವಾಲಯ ಇದಕ್ಕೊಂದು ಪರಿಹಾರ ಹುಡುಕಬೇಕು ಎಂದು ಅವರು ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.