ADVERTISEMENT

545 ಪಿಎಸ್‌ಐ ಲಿಖಿತ ಪರೀಕ್ಷೆ ರದ್ದುಗೊಳಿಸಿ ಸರ್ಕಾರ ಆದೇಶ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 14:26 IST
Last Updated 30 ಏಪ್ರಿಲ್ 2022, 14:26 IST
   

ಬೆಂಗಳೂರು: 545 ಪಿಎಸ್‌ಐ ನೇಮಕಾತಿಗಾಗಿ ನಡೆಸಿದ್ದ ಲಿಖಿತ ಪರೀಕ್ಷೆಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಹೊಸದಾಗಿ ಮರು ಲಿಖಿತ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದೆ.

‘ಪಿಎಸ್‌ಐ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಸರ್ಕಾರದಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ನೇಮಕಾತಿಯಲ್ಲಿ ಅಕ್ರಮ ಎಸಗಿರುವುದು ಹಾಗೂ ನ್ಯಾಯೋಚಿತವಾಗಿ ನೇಮಕಾತಿ ನಡೆಸದೇ ಇರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ. ಹೀಗಾಗಿ, ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

‘ರಾಜ್ಯದ 92 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಕಲಬುರಗಿ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ 11 ಅಭ್ಯರ್ಥಿಗಳ ಪೈಕಿ 8 ಮಂದಿ ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.’

‘ಅಭ್ಯರ್ಥಿಗಳು, ಶಾಲಾ ಸಿಬ್ಬಂದಿ, ವ್ಯವಸ್ಥಾಪಕರು, ಏಜೆಂಟರು ಹಾಗೂ ಇತರರ ಸಹಕಾರದಿಂದ ಪರೀಕ್ಷೆ ಪ್ರಕ್ರಿಯೆಯನ್ನು ಗಣನೀಯವಾಗಿ ದುರ್ಬಲಗೊಳಿಸಿರುವುದು ಸಿಐಡಿ ವಿಚಾರಣೆ ಹಾಗೂ ತನಿಖೆಯಿಂದ ಗೊತ್ತಾಗಿದೆ. ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದ ರೀತಿಯಲ್ಲೇ ಇತರೆ ಪರೀಕ್ಷಾ ಕೇಂದ್ರದಲ್ಲಿ ಅವ್ಯವಹಾರ ನಡೆದಿರುವುದನ್ನು ತಳ್ಳಿಹಾಕಲಾಗುವುದಿಲ್ಲ’ ಎಂದೂ ಆದೇಶದಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.