ADVERTISEMENT

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್; ವರದಿ ಪರಿಶೀಲಿಸಿ ಮುಂದಿನ ಕ್ರಮ: ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2025, 15:46 IST
Last Updated 22 ಡಿಸೆಂಬರ್ 2025, 15:46 IST
<div class="paragraphs"><p>ಜಿ. ಪರಮೇಶ್ವರ</p></div>

ಜಿ. ಪರಮೇಶ್ವರ

   

ಬೆಂಗಳೂರು: ‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ. ಈ ಸಮಿತಿಯು ಸರ್ಕಾರಕ್ಕೆ ನೀಡಲಿರುವ ವರದಿ ಆಧರಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸೋಮವಾರ ಅವರು ಸಭೆ ನಡೆಸಿದರು.

ADVERTISEMENT

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪರಮೇಶ್ವರ, ‘ಇದೇ 24ರಂದು ವಿಜಯ್ ಹಜಾರೆ ಕ್ರಿಕೆಟ್ ಪಂದ್ಯ ನಡೆಸಲು ಅನುಮತಿ ನೀಡುವಂತೆ ಕೆಎಸ್‌ಸಿಎ ಮನವಿ ಮಾಡಿದೆ. ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವುದಿಲ್ಲ. ಪಂದ್ಯ ಮಾತ್ರ ನಡೆಸುತ್ತೇವೆ ಎಂದು ಕೆಎಸ್‌ಸಿಎಯವರು ಹೇಳಿದ್ದಾರೆ’ ಎಂದರು.

‘ಕ್ರೀಡಾಪಟುಗಳ ಸುರಕ್ಷತೆ ದೃಷ್ಟಿಯಿಂದ ಜಿಬಿಎ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ, ಲೋಕೋಪಯೋಗಿ, ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆ, ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ ವರದಿ ನೀಡಲಿದೆ’ ಎಂದರು.

‘ಬೆಂಗಳೂರು ನಗರ ಪೊಲೀಸ್ ಆಯುಕ್ತರು 17 ಅಂಶಗಳ ಸಲಹೆ ಸೂಚನೆಗಳನ್ನು ಪಾಲಿಸುವುದು ಅಗತ್ಯ ಎಂದು ಸೂಚಿಸಿ ಪತ್ರ ಬರೆದಿದ್ದರು. ಅದರಲ್ಲಿ ಏನೆಲ್ಲ ಪೂರ್ಣಗೊಳಿಸಲಾಗಿದೆ ಎಂಬುದನ್ನು ಪರಿಶೀಲಿಸಿ ಸಮಿತಿಯು ಸರ್ಕಾರಕ್ಕೆ ತಿಳಿಸಲಿದೆ. ಕೆಲವು ದಿನಗಳ ಹಿಂದೆಯಷ್ಟೆ ಕೆಎಸ್‌ಸಿಎ ಹೊಸ ಸಮಿತಿ ರಚನೆಯಾಗಿದೆ. ಎಲ್ಲವನ್ನು ಪೂರ್ಣಗೊಳಿಸುವುದಾಗಿ ಕೆಎಸ್‌ಸಿಎಯವರು ಹೇಳಿದ್ದಾರೆ’ ಎಂದು ಸಚಿವರು ತಿಳಿಸಿದರು.

ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ. ಶರತ್ ಚಂದ್ರ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್. ಹಿತೇಂದ್ರ ಮತ್ತು ಕೆಎಸ್‌ಸಿಎ ಪದಾಧಿಕಾರಿಗಳು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.