ADVERTISEMENT

ವಿಐಎಸ್‌ಎಲ್‌ ಬಂದ್‌ ಬೇಡ: ಕೇಂದ್ರಕ್ಕೆ ರಾಜ್ಯ ಮತ್ತೊಮ್ಮೆ ಪತ್ರ

​ಪ್ರಜಾವಾಣಿ ವಾರ್ತೆ
Published 14 ಜುಲೈ 2023, 15:47 IST
Last Updated 14 ಜುಲೈ 2023, 15:47 IST
   

ನವದೆಹಲಿ: ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು (ವಿಐಎಸ್‌ಎಲ್‌) ಮುಚ್ಚಬಾರದು ಎಂದು ಒತ್ತಾಯಿಸಿ ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷರಿಗೆ ಕರ್ನಾಟಕ ಸರ್ಕಾರ ಮತ್ತೊಮ್ಮೆ ಪತ್ರ ಬರೆದಿದೆ. 

‘ಕಾರ್ಖಾನೆಯನ್ನು ಪುನರುಜ್ಜೀವನಗೊಳಿಸಲು ಕೇಂದ್ರ ಸರ್ಕಾರವು ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಈ ಎಲ್ಲ ಕ್ರಮಗಳು ವಿಫಲಗೊಂಡ ಕಾರಣ ಕಾರ್ಖಾನೆಯನ್ನು ಮುಚ್ಚಲು ತೀರ್ಮಾನಿಸಲಾಗಿದೆ’ ಎಂದು ಉಕ್ಕು ಸಚಿವರು ಲೋಕಸಭೆಗೆ ತಿಳಿಸಿದ್ದರು. 

ಸಂಸ್ಥೆಯನ್ನು ಖಾಸಗೀಕರಣ ಮಾಡಲು ಕೇಂದ್ರ ಸಚಿವ ಸಂಪುಟವು 2016ರಲ್ಲಿ ಒಪ್ಪಿಗೆ ನೀಡಿತ್ತು. ಸಂಸ್ಥೆಯನ್ನು ಸಂಪೂರ್ಣವಾಗಿ ಮಾರಾಟ ಮಾಡಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯು (ಡಿಐಪಿಎಎಂ) ಈ ಹಿಂದೆ ಬಿಡ್‌ ಕರೆದಿತ್ತು. ಬಿಡ್‌ದಾರರು ಆಸಕ್ತಿ ವಹಿಸದ ಕಾರಣಕ್ಕೆ ಕಾರ್ಖಾನೆಯನ್ನು ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ 2022ರ ನವೆಂಬರ್‌ನಲ್ಲಿ ಕೈ ಬಿಟ್ಟಿತ್ತು. ನಂತರ ಸರ್ಕಾರವು ಕಾರ್ಖಾನೆಯನ್ನು ಮುಚ್ಚಲು ತೀರ್ಮಾನಿಸಿತ್ತು. 

ADVERTISEMENT

‘ಕಾರ್ಖಾನೆಯನ್ನು ಮುಚ್ಚಬಾರದು ಎಂದು ಒತ್ತಾಯಿಸಿ ರಾಜ್ಯ ಸರ್ಕಾರವು 2019, 2020 ಹಾಗೂ 2021ರಲ್ಲಿ ಪತ್ರ ಬರೆದು ಒತ್ತಾಯಿಸಿತ್ತು. ಆದರೆ, ಕಾರ್ಖಾನೆಯನ್ನು ಬಂದ್‌ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅದರ ಬದಲು ಉಕ್ಕು ಪ್ರಾಧಿಕಾರವು ಕಾರ್ಖಾನೆಗೆ ಹೆಚ್ಚಿನ ಬಂಡವಾಳ ಹೂಡಬೇಕು. ಅಗತ್ಯವಿದ್ದರೆ, ಖಾಸಗಿಯವರಿಗೆ ವಹಿಸಲು ಮತ್ತೊಮ್ಮೆ ಬಿಡ್‌ ಕರೆಯಬೇಕು’ ಎಂದು ರಾಜ್ಯ ಸರ್ಕಾರವು ಪತ್ರದಲ್ಲಿ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.