ADVERTISEMENT

ಜಿ.ಪಂ. ಸಿಇಒಗಳ ಜತೆ ಸಿಎಂ ಸಭೆ: ಬಜೆಟ್ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಮೇ 2022, 9:47 IST
Last Updated 9 ಮೇ 2022, 9:47 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿಗಳ‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ (ಸಿಇಒ) ಜತೆ ಸೋಮವಾರ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಜೆಟ್ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಬೆಳಿಗ್ಗೆ 10ರಿಂದ ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಸಭೆ ನಡೆಯಿತು. ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಕೆಲವು ಜಿಲ್ಲಾ ಪಂಚಾಯಿತಿಗಳ ಸಿಇಒಗಳು ಖುದ್ದಾಗಿ ಹಾಜರಿದ್ದರು. ಉಳಿದವರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಭಾಗಿಯಾದರು.

ವಸತಿ ಯೋಜನೆಗಳ ಅಡಿಯಲ್ಲಿ ಮನೆಗಳ ನಿರ್ಮಾಣ, ಶಾಲೆ ಮತ್ತು ಅಂಗನವಾಡಿ ಕಟ್ಟಡಗಳ ನಿರ್ಮಾಣ, ಆರೋಗ್ಯ ಕೇಂದ್ರಗಳಿಗೆ ಕಟ್ಟಡ ನಿರ್ಮಾಣ ಮತ್ತು ಅವುಗಳನ್ನು ಮೇಲ್ದರ್ಜೆಗೇರಿಸುವುದು, ಪಡಿತರ ವಿತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಈ ಯೋಜನೆಗಳಿಗೆ ಸಂಬಂಧಿಸಿದಂತೆ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ತಕ್ಷಣದಿಂದಲೇ ಕೆಲಸ ಆರಂಭಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ADVERTISEMENT

ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಾಯಿ, 'ಬಜೆಟ್ ನಲ್ಲಿ ಪ್ರಕಟಿಸಿರುವ ಎಲ್ಲ ಕಾರ್ಯಕ್ರಮಗಳನ್ನೂ ಅನುಷ್ಠಾನಕ್ಕೆ ತರಬೇಕು. ಯಾವ ವಿಚಾರದಲ್ಲೂ ವಿಳಂಬ ಮಾಡುವಂತಿಲ್ಲ. ಕಾಲಮಿತಿಯಲ್ಲಿ ಕೆಲಸ ಮಾಡಬೇಕು ಎಂಬ ಸೂಚನೆ ನೀಡಿದ್ದೇನೆ' ಎಂದರು.

ಗೋವಿಂದ ಕಾರಜೋಳ, ಸಿ.ಸಿ. ಪಾಟೀಲ, ಉಮೇಶ ಕತ್ತಿ, ವಿ.‌ಸುನಿಲ್ ಕುಮಾರ್, ಬಿ.ಸಿ. ನಾಗೇಶ್, ಡಾ.ಕೆ. ಸುಧಾಕರ್ ಸೇರಿದಂತೆ ಹಲವು ಸಚಿವರು, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.