
ನವದೆಹಲಿ: ‘ಕರ್ನಾಟಕದಲ್ಲಿ ಭ್ರಷ್ಟಾಚಾರ ಸಾಂಸ್ಥೀಕರಣಗೊಂಡಿದೆ. ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ಕಾಂಗ್ರೆಸ್ ಸರ್ಕಾರದ ನೈಜ ಮುಖವನ್ನು ಬಯಲು ಮಾಡಿದ್ದಾರೆ’ ಎಂದು ಬಿಜೆಪಿ ಹೇಳಿದೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ವಕ್ತಾರ ಪ್ರತ್ಯೂಷ್ ಕಾಂತ್, ‘ಇಲ್ಲಿಯ ತನಕ ಕರ್ನಾಟಕವನ್ನು ಭ್ರಷ್ಟಾಚಾರದ ಪ್ರಯೋಗಶಾಲೆ ಎಂದು ಕರೆಯಲಾಗುತ್ತಿತ್ತು. ಆದರೆ, ಇತ್ತೀಚಿನ ಬೆಳವಣಿಗೆಗಳಿಂದಾಗಿ ಕರ್ನಾಟಕವು ದೇಶದ ಅತ್ಯಂತ ಭ್ರಷ್ಟ ರಾಜ್ಯ ಎಂದು ಸಾಬೀತಾಗಿದೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಧ್ವನಿ ಎತ್ತಿದ್ದಾರೆ. ತಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರ ಇದೆ ಎಂಬುದನ್ನು ಕಂದಾಯ ಸಚಿವರೂ ಒಪ್ಪಿಕೊಂಡಿದ್ದಾರೆ’ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಹಾಗೂ ಲೂಟಿಯ ಎಟಿಎಂ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ರ‍್ಯಾಲಿಗಳಲ್ಲಿ ಎಚ್ಚರಿಸಿದ್ದರು. ಈಗ ಅವರ ಮಾತು ನಿಜವಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.