ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಇತರ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಮೂರು ತಿಂಗಳ ಒಳಗೆ ಭರ್ತಿ ಮಾಡಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ನೇತೃತ್ವದ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಯ ಉಪಸಮಿತಿ ನಿರ್ಧರಿಸಿದೆ.
ಈ ಹುದ್ದೆಗಳ ಭರ್ತಿಗಳಿಗೆ ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಶನಿವಾರ ನಡೆದ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಈ ಸಮಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್, ಮೀನುಗಾರಿಕೆ ಸಚಿವ ಎಸ್. ಅಂಗಾರ, ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಮತ್ತು ಪರಿಶಿಷ್ಟ ವರ್ಗಗಳ ಸಚಿವ ಬಿ. ಶ್ರೀರಾಮುಲು ಇದ್ದಾರೆ.
ಇಲಾಖಾವಾರು, ನಿಗಮವಾರು, ವಿಶ್ವವಿದ್ಯಾಲಯವಾರು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಮಿತಿ ವಿವರವಾಗಿ ಪರಿಶೀಲಿಸಿತು. ಸರ್ಕಾರಿ, ಅನುದಾನಿತ ಹಾಗೂ ಅನುದಾನಿತ ತಾಂತ್ರಿಕ ಕಾಲೇಜುಗಳಲ್ಲಿ ಮತ್ತು ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 436 ಸೇರಿ ಒಟ್ಟು 882 ಹುದ್ದೆಗಳ ನೇಮಕಾತಿ ಬಾಕಿ ಇದೆ ಎಂಬ ವಿಷಯವನ್ನು ಸಮಿತಿ ಗಂಭೀರವಾಗಿ ಪರಿಗಣಿಸಿತು.
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮೂಲಕ ನಡೆಸಬೇಕಾದ ನೇಮಕಾತಿಗಳಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ, ಆರು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಸರ್ಕಾರಕ್ಕೆ ಆಯ್ಕೆ ಪಟ್ಟಿ ಸಲ್ಲಿಸುವಂತೆ ಕೆಪಿಎಸ್‌ಸಿಗೆ ಕೋರಲು ಕ್ರಮಗೊಳ್ಳುವಂತೆ ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಯಿತು. ಸಭೆಯಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು, ಪ್ರಧಾನ ಕಾರ್ಯದರ್ಶಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.