ADVERTISEMENT

ಆಕ್ಷೇಪಣೆಗೆ ಕಾಲಾವಕಾಶ ಕೋರಿಕೆ

ಮಸೀದಿಗಳಲ್ಲಿನ ಧ್ವನಿವರ್ಧಕಗಳಿಂದ ಶಬ್ದ ಮಾಲಿನ್ಯ ಆರೋಪ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 19:52 IST
Last Updated 5 ಅಕ್ಟೋಬರ್ 2021, 19:52 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಮಸೀದಿಗಳ ಧ್ವನಿವರ್ಧಕಗಳಿಂದ ಶಬ್ದಮಾಲಿನ್ಯ ಉಂಟಾಗುತ್ತಿದೆ ಎಂದು ಆರೋಪಿಸಿದ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರ ಕಾಲಾವಕಾಶ ಬೇಕು’ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮನವಿ ಮಾಡಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ಮುಂದಿನ ವಿಚಾರಣೆ ದಿನದಂದುಈ ಅರ್ಜಿಯ ವಿಚಾರಣಾ ಮಾನ್ಯತೆಯನ್ನುರಾಷ್ಟೀಯ ಹಸಿರು ನ್ಯಾಯಾಧೀಕರಣ ನಿರ್ದೇಶನಗಳ ಪ್ರಕಾರ ಪರಿಶೀಲಿಸಲಾಗುವುದು’ ಎಂದು ತಿಳಿಸಿದ ನ್ಯಾಯಪೀಠ, ನವೆಂಬರ್ 16ಕ್ಕೆ ವಿಚಾರಣೆ ಮುಂದೂಡಿದೆ.

ADVERTISEMENT

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಶ್ರೀಧರಪ್ರಭು, ‘ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳು-2000’ ಅನ್ವಯ ಲಿಖಿತ ಪರವಾನಿಗೆ ಪಡೆಯದ ಹೊರತು ಧ್ವನಿವರ್ಧಕಗಳನ್ನು ಬಳಸುವುದಿಲ್ಲ ಎಂದು ಸ್ಪಷ್ಟಪಡಿಸಿ ಪ್ರಮಾಣಪತ್ರ ಸಲ್ಲಿಸುವಂತೆ ಥಣಿಸಂದ್ರ ಹಾಗೂ ಸುತ್ತಲಿನ 16 ಮಸೀದಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿತ್ತು’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಮಸೀದಿಗಳ ಆಡಳಿತ ಮಂಡಳಿ ಪರ ವಕೀಲರು, ’ಎಲ್ಲಾ 16 ಮಸೀದಿಗಳಲ್ಲಿ ಶಬ್ದ ಮಿತಿ ನಿಯಂತ್ರಿಸುವ ಶಬ್ದ ಮತ್ತು ನಿಯಂತ್ರಣ ಮಾಪಕಗಳನ್ನು ಅಳವಡಿಸಲಾಗಿದೆ. ಒಂದೊಮ್ಮೆ ಮಿತಿಗಿಂತ ಅಧಿಕ ಶಬ್ದ ಉಂಟಾದರೆ ಅದು ನೇರವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಯ ಗಮನಕ್ಕೆ ಬರುತ್ತದೆ. ಆಗ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಅಲ್ಲದೇ ಧ್ವನಿವರ್ಧಕಗಳ ಬಳಕೆಗೆ ಲಿಖಿತ ಪರವಾನಿಗೆ ಪಡೆದುಕೊಳ್ಳಲಾಗಿದೆ’ ಎಂಬ ಅಂಶಗಳನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಪಿ.ರಾಕೇಶ್ ಮತ್ತು ಅಯ್ಯಪ್ಪ ದಾಸ್ ಬಾಲಗೋಪಾಲ್ ಸೇರಿದಂತೆ ಥಣಿಸಂದ್ರ ಮುಖ್ಯ ರಸ್ತೆಯ ಐಕಾನ್ ಅಪಾರ್ಟ್‌ಮೆಂಟ್‌ನ 32 ನಿವಾಸಿಗಳು ಸುತ್ತಲಿನ 16 ಮಸೀದಿಗಳ ವಿರುದ್ಧ ಈ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.