ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೆ ಒಳಗಾಗಿರುವ ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 9 ದಿನ ಇ.ಡಿ ಕಸ್ಟಡಿಗೆ ನೀಡಿ ಆದೇಶಿಸಿದೆ.
ದಿನೇಶ್ ಕುಮಾರ್ ಅವರನ್ನು ಇ.ಡಿ ಅಧಿಕಾರಿಗಳು ಮಂಗಳವಾರ (ಸೆ.16) ಬಂಧಿಸಿದ್ದರು. ಬುಧವಾರ ಸಂಜೆ 4.30ಕ್ಕೆ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ತೆರೆದ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು.
ಈ ವೇಳೆ ಆರೋಪಿ ಪರ ವಕೀಲರು ಮಧ್ಯಂತರ ಜಾಮೀನಿಗೆ ಮನವಿ ಮಾಡಿದರು. ಆದರೆ, ಇದನ್ನು ತೀವ್ರವಾಗಿ ವಿರೋಧಿಸಿದ ಇ.ಡಿ ಪರ ಹಾಜರಿದ್ದ ಹೈಕೋರ್ಟ್ ವಕೀಲ ಮಧುಕರ ಎಂ.ದೇಶಪಾಂಡೆ, ಆರೋಪಿಯನ್ನು 14 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಇ.ಡಿ ಮನವಿಯನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಆರೋಪಿ ದಿನೇಶ್ ಕುಮಾರ್ ಅವರನ್ನು ಇದೇ 26ರವರೆಗೆ ಇ.ಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.