
ಅಲೋಕ್ ಕುಮಾರ್
ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ಕೇಂದ್ರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ (ಎಡಿಜಿಪಿ) ಅಲೋಕ್ ಕುಮಾರ್ ಅವರಿಗೆ ರಾಜ್ಯ ಸರ್ಕಾರವು ಪದನ್ನೋತಿ ನೀಡಿ, ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ವರ್ಗಾವಣೆ ಮಾಡಿ ಬುಧವಾರ ಆದೇಶಿಸಿದೆ.
ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ಎಡಿಜಿಪಿ ಬಿ.ದಯಾನಂದ ಅವರನ್ನು ಪೊಲೀಸ್ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಕಾರಾಗೃಹಗಳ ಇಲಾಖೆ ಪೊಲೀಸ್ ಮಹಾನಿರ್ದೇಶಕರಾಗಿದ್ದ ಮಾಲಿನಿ ಕೃಷ್ಣಮೂರ್ತಿ ಅವರು ನಿವೃತ್ತರಾದ ಮೇಲೆ ಡಿಜಿಪಿ ಹುದ್ದೆ ಖಾಲಿಯಿತ್ತು.
2019ರಲ್ಲಿ ನಡೆದಿದ್ದ ಫೋನ್ ಟ್ಯಾಪಿಂಗ್ ಹಗರಣದಲ್ಲಿ ಅಲೋಕ್ ಕುಮಾರ್ ಸೇರಿ ಕೆಲವು ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ಇಲಾಖಾ ತನಿಖೆಗೆ ಆದೇಶ ಹೊರಡಿಸಿತ್ತು. ಹಗರಣ ನಡೆದ ವೇಳೆ ಅಲೋಕ್ ಕುಮಾರ್ ಅವರು ನಗರ ಪೊಲೀಸ್ ಕಮಿಷನರ್ ಆಗಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ನ್ಯಾಯಾಲಯಕ್ಕೆ ಬಿ–ವರದಿ ಸಲ್ಲಿಸಿತ್ತು. ಆದರೆ, ಕಳೆದ ಮೇನಲ್ಲಿ ಇಲಾಖಾ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಅವರು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು. ‘ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ’ ಎಂದು ವಾದಿಸಿದ್ದರು.
ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಇತ್ತೀಚೆಗೆ ರದ್ದುಗೊಳಿಸಿತ್ತು. ಅದರ ಬೆನ್ನಲ್ಲೇ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡಲಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.