ADVERTISEMENT

ಸರ್ಕಾರದಿಂದಲೇ ನೀಟ್‌ ಕೋಚಿಂಗ್‌ ಆರಂಭಿಸಲು ಚಿಂತನೆ: ಸಚಿವ ಕೆ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2022, 10:04 IST
Last Updated 8 ಮಾರ್ಚ್ 2022, 10:04 IST
ಡಾ.ಕೆ. ಸುಧಾಕರ್‌
ಡಾ.ಕೆ. ಸುಧಾಕರ್‌   

ಬೆಂಗಳೂರು: ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರದ ವತಿಯಿಂದ ನೀಟ್‌ ಕೋಚಿಂಗ್‌ ಕೇಂದ್ರಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ವಿರೋಧಪಕ್ಷದ ಉಪನಾಯಕ ಯು.ಟಿ.ಖಾದರ್ ಅವರ ಪ್ರಶ್ನೆಗೆ ಉತ್ತರಿಸಿ, ನೀಟ್‌ ಕೋಚಿಂಗ್ ಕೇಂದ್ರ ತೆರೆಯುವುದರಿಂದ ಬಡ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.

ನೀಟ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಗಳು ಹೊಸ ನೀತಿ ಮಾಡಲು ಸಾಧ್ಯವಿಲ್ಲ. ನೀಟ್‌, ನ್ಯಾಷನಲ್‌ ಮೆಡಿಕಲ್‌ ಕೌನ್ಸಿಲ್‌ ಅಧೀನದಲ್ಲಿ ಬರುತ್ತದೆ. ಈಗಿರುವ ನೀತಿಯ ಪ್ರಕಾರ, ಶೇ 85 ರಷ್ಟು ಸೀಟ್‌ಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಮತ್ತು ಶೇ 15 ರಷ್ಟು ಸೀಟ್‌ಗಳನ್ನು ಅಖಿಲ ಭಾರತ ಕೋಟಾದಡಿ ಹಂಚಿಕೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ADVERTISEMENT

ಯುದ್ಧ ಪೀಡಿತ ಉಕ್ರೇನ್‌ನಿಂದ ಬಂದಿರುವ ವಿದ್ಯಾರ್ಥಿಗಳಿಗೆ ಇಲ್ಲಿಯೇ ವೈದ್ಯಕೀಯ ಶಿಕ್ಷಣ ಮುಂದುವರೆಸುವ ಸಾಧ್ಯತೆಗಳ ವಿಚಾರವಾಗಿ ಮುಖ್ಯಮಂತ್ರಿಯವರು ರಾಜೀವ್‌ಗಾಂಧಿ ವಿಶ್ವವಿದ್ಯಾಲಯ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ ಎಂದೂ ಸುಧಾಕರ್‌ ತಿಳಿಸಿದರು.

ವಿಷಯ ಪ್ರಸ್ತಾಪಿಸಿದ ಖಾದರ್‌, ನೀಟ್‌ನಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ವೈದ್ಯಕೀಯ ಪ್ರವೇಶಕ್ಕೆ ನೀಟ್‌ನಿಂದ ಶೇ 50 ಮತ್ತು ಪಿಯುಸಿಯ ಶೇ 50 ರಷ್ಟು ಅಂಕವನ್ನು ಪರಿಗಣಿಸಬೇಕು. ಉಕ್ರೇನ್‌ನಿಂದ ಬಂದಿರುವ ವಿದ್ಯಾರ್ಥಿಗಳಿಗೆ ಇಲ್ಲೇ ವೈದ್ಯಕೀಯ ಶಿಕ್ಷಣ ಮುಂದುವರೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.