ADVERTISEMENT

ಎಸ್ಸಿ– ಎಸ್ಟಿ ಮೀಸಲಾತಿ ಹೆಚ್ಚಳ: ಸರ್ಕಾರಕ್ಕೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2023, 22:00 IST
Last Updated 24 ಫೆಬ್ರುವರಿ 2023, 22:00 IST
   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಬೆಂಗಳೂರಿನ ಕೆಎಲ್‌ಇ ಕಾನೂನು ಕಾಲೇಜಿನ ವಿದ್ಯಾರ್ಥಿ ಮಹೇಶ್ ಎನ್‌.ಉಪ್ಪಾರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ‍ಪ್ರತಿವಾದಿ
ಯಾದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಅರ್ಜಿಯಲ್ಲಿ ಏನಿದೆ?: ‘ಶೈಕ್ಷಣಿಕ ಸಂಸ್ಥೆಗಳಲ್ಲಿನ ಸೀಟು, ರಾಜ್ಯ ಸರ್ಕಾರಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಯವರ ಮೀಸಲು ಪ್ರಮಾಣವನ್ನು ಶೇ 15ರಿಂದ 17ಕ್ಕೆ, ಪರಿಶಿಷ್ಟ ಪಂಗಡದವರಿಗೆ ಶೇ 3ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದು ಸಂವಿಧಾನದ 14 (ಸಮಾನತೆ) 15 (ಸಮಾನ ಉದ್ಯೋಗವಕಾಶ) ಮತ್ತು 16ನೇ (ಜಾತಿ, ಧರ್ಮ, ಜನಾಂಗ, ಲಿಂಗ, ಜನ್ಮಸ್ಥಳ ಹೆಸರಿನಲ್ಲಿ ತಾರತಮ್ಯ ನಿಷೇಧ) ವಿಧಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ’ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

ADVERTISEMENT

‘ಕೇಂದ್ರ ಸರ್ಕಾರ, ಸಾರ್ವಜನಿಕ ಉದ್ದಿಮೆಗಳು ಮತ್ತು ಎಲ್ಲ ರಾಜ್ಯಗಳಲ್ಲಿ ಒಟ್ಟು 60 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಿವೆ. ಕೇಂದ್ರ ಸರ್ಕಾರವೊಂದರಲ್ಲೇ 30.7 ಲಕ್ಷ, ಕರ್ನಾಟಕ ಸರ್ಕಾರದಲ್ಲಿ 2.3 ಲಕ್ಷ ಹುದ್ದೆಗಳು ಖಾಲಿಯಿವೆ. ಇದರಲ್ಲಿ ಹೆಚ್ಚಿನ ಸಂಖ್ಯೆಯ ಉದ್ಯೋಗಗಳನ್ನು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ಮೀಸಲಿಡಲಾಗಿದೆ. ಆದರೆ, ಇವುಗಳ ಭರ್ತಿ ವಿಳಂಬಕ್ಕೆ ಸರ್ಕಾರಗಳಿಂದ ಯಾವುದೇ ಸ್ಪಷ್ಟನೆ ಇಲ್ಲ’ ಎಂದು ಅರ್ಜಿದಾರರು ದೂರಿದ್ದಾರೆ. ‘ನಿಯಮದ ಪ್ರಕಾರ ಒಟ್ಟಾರೆ ಮೀಸಲು ಪ್ರಮಾಣವು ಶೇ 50ರಷ್ಟೇ ಇರಬೇಕು. ಹೀಗಾಗಿ, ಕಾಯ್ದೆಯನ್ನು ಸಂವಿಧಾನಬಾಹಿರ ಎಂದು ಘೋಷಿಸಬೇಕು’ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.