ಸಿದ್ದರಾಮಯ್ಯ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬ ಕೋರಿಕೆ ತಿರಸ್ಕರಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಕೆಲಕಾಲ ಮೇಲ್ಮನವಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಸಿಬಿಐ, ಸಿದ್ದರಾಮಯ್ಯನವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ಜೆ.ದೇವರಾಜು ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಿತು.
ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ತಿರಸ್ಕರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.