ಕರ್ನಾಟಕ ಹೈಕೋರ್ಟ್ ಹಾಗೂ ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ಹೈಕೋರ್ಟ್, ಅಪರಾಧವನ್ನು ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ವಜಾಗೊಳಿಸಿದೆ.
‘ನನ್ನ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ್ದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ (ಧಾರವಾಡ) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಕಾಯ್ದಿರಿಸಿದ್ದ ತೀರ್ಪನ್ನು ಶುಕ್ರವಾರ ಪ್ರಕಟಿಸಿದರು.
ಇದೇ ವೇಳೆ ನ್ಯಾಯಪೀಠವು ಯಡಿಯೂರಪ್ಪನವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂಜ್ಞೇಯ ಅಪರಾಧವನ್ನು ಪರಿಗಣಿಸಿ ಸಕ್ಷಮ ನ್ಯಾಯಾಲಯ ನೀಡಿರುವ ಆದೇಶವನ್ನು ಯಡಿಯೂರಪ್ಪ ಅವರಿಗೆ ಸೀಮಿತಗೊಳಿಸಿ ವಜಾ ಮಾಡಲಾಗಿದೆ. ಅಪರಾಧ, ತನಿಖೆ, ಅಂತಿಮ ವರದಿ ಎಲ್ಲವೂ ಹಾಗೆಯೇ ಉಳಿಯಲಿವೆ. ಯಡಿಯೂರಪ್ಪ ಅವರಿಗೆ ಸದ್ಯಕ್ಕೆ ಬಂಧನದ ಭೀತಿ ಇಲ್ಲವಾದರೂ ವಿಚಾರಣಾ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಯಲಿದೆ.
ಪ್ರಕರಣವೇನು?: ‘ನನ್ನ ಮಗಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಹಾಯ ಮಾಡಬೇಕು’ ಎಂದು ಬೇಡಿ ಬಂದಿದ್ದ ಸಂತ್ರಸ್ತ ಬಾಲಕಿಯ ತಾಯಿ ನೀಡಿದ್ದ ದೂರಿನ ಅನುಸಾರ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಆರ್‌ಎಂವಿ ಎರಡನೇ ಹಂತದಲ್ಲಿನ ಡಾಲರ್ಸ್ ಕಾಲೊನಿಯಲ್ಲಿರುವ ಯಡಿಯೂರಪ್ಪ ಅವರ ‘ಧವಳಗಿರಿ’ ನಿವಾಸದಲ್ಲಿ 2024ರ ಫೆಬ್ರುವರಿ 2ರಂದು ಬೆಳಗ್ಗೆ 11ರಿಂದ 11.30ರ ನಡುವೆ ‘ಬಾಲಕಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ’ ಎಂದು ಆರೋಪಿಸಲಾಗಿದೆ.
ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಕಲಂ 8ರ ಅಡಿ ಲೈಂಗಿಕ ದೌರ್ಜನ್ಯ, ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 354 (ಎ)ರ ಅಡಿಯಲ್ಲಿ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದೆ. ಇತರ ಮೂವರ ವಿರುದ್ಧ ಐಪಿಸಿ ಕಲಂ 204 ಮತ್ತು 214ರ ಅಡಿ ಸಾಕ್ಷ್ಯ ನಾಶ ಮತ್ತು ಉಡುಗೊರೆ ನೀಡಲು ಮುಂದಾದ ಅಪರಾಧಗಳಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.