ಬೆಂಗಳೂರು: ‘ನಗರ, ಜಿಲ್ಲಾ ಮತ್ತು ಗ್ರಾಮೀಣ ಪ್ರದೇಶ ಸೇರಿದಂತೆ ರಾಜ್ಯದೆಲ್ಲೆಡೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ವೈದ್ಯಕೀಯ ಮೂಲಸೌಕರ್ಯ ಹಾಗೂ ಸಿಬ್ಬಂದಿ ಕೊರತೆ ಆಗದಂತೆ ನಿರಂತರ ಮೇಲ್ವಿಚಾರಣೆ ನಡೆಸಲು ಮೂವರ ಸಮಿತಿಯನ್ನು ನೇಮಕ ಮಾಡಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
‘ರಾಜ್ಯದಲ್ಲಿ ಸುಮಾರು 16,500 ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ’ ಎಂಬ ಮಾಧ್ಯಮ ವರದಿ ಆಧರಿಸಿ ಸ್ವಯಂ ಪ್ರೇರಿತವಾಗಿ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ನಿರ್ದೇಶಿಸಿದೆ.
‘ಸರ್ಕಾರ ರಚಿಸುವ ಸಮಿತಿ ಆರು ತಿಂಗಳಿಗೊಮ್ಮೆ ಸಭೆ ಸೇರಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳೂ (ಪಿಎಚ್‌ಸಿ) ಸೇರಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಎಷ್ಟು ವೈದ್ಯಕೀಯ ಸಿಬ್ಬಂದಿ, ಮೂಲಸೌಕರ್ಯ ಹಾಗೂ ಔಷಧಿಯ ಕೊರತೆ ಇದೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಬೇಕು’ ಎಂದು ಸೂಚಿಸಿದೆ.
ಭರ್ತಿ: ‘ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು’ ಎಂಬ ರಾಜ್ಯ ಸರ್ಕಾರದ ಭರವಸೆಗೆ, ‘ಖಾಲಿ ಇರುವ ವಿವಿಧ ಶ್ರೇಣಿಯ ಹುದ್ದೆಗಳನ್ನು ಆದ್ಯತೆಯ ಮೇರೆಗೆ ಭರ್ತಿ ಮಾಡಲು ಸಾಧ್ಯವಾದ ಎಲ್ಲಾ ಕ್ರಮ ಜರುಗಿಸಿ. ಈಗಾಗಲೇ ಆರಂಭಿಸಲಾಗಿರುವ ಭರ್ತಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಿ’ ಎಂದು ನಿರ್ದೇಶಿಸಿದೆ.
‘ಈ ಅರ್ಜಿಯನ್ನು ವಿಲೇವಾರಿ ಮಾಡಲಾಗುತ್ತಿದೆ. ಆದರೆ, ಮೂಲಸೌಕರ್ಯ ಹಾಗೂ ಸಿಬ್ಬಂದಿ ಕೊರತೆ ನೀಗಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು’ ಎಂದು ಆದೇಶಿಸಿದೆ. ಪ್ರಕರಣದಲ್ಲಿ ಹೈಕೋರ್ಟ್ ವಕೀಲ ಶ್ರೀಧರ ಪ್ರಭು ಅಮಿಕಸ್ ಕ್ಯೂರಿ (ನ್ಯಾಯಾಲಯಕ್ಕೆ ಸಹಕರಿಸುವ ವಕೀಲ) ಆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.