ಪ್ರತಿಭಟನೆ
ಬೆಂಗಳೂರು: ‘ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ ಚಂದನಗೌಡರ, ಕೆ.ನಟರಾಜನ್, ಎನ್.ಎಸ್.ಸಂಜಯಗೌಡ ಮತ್ತು ಕೃಷ್ಣ ಎಸ್. ದೀಕ್ಷಿತ್ ಅವರನ್ನು ವರ್ಗಾವಣೆ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಕೈಗೊಂಡಿರುವ ಶಿಫಾರಸು ನಿರ್ಧಾರ ಹಿಂಪಡೆಯುವಂತೆ ಆಗ್ರಹಿಸಿ ಹೈಕೋರ್ಟ್ ವಕೀಲರು ಬುಧವಾರ ದೈನಂದಿನ ಕೋರ್ಟ್ ಕಲಾಪಗಳಿಂದ ಹೊರಗುಳಿದರು.
ಬೆಳಿಗ್ಗೆ 10.30ಕ್ಕೆ ಹೈಕೋರ್ಟ್‌ನ ಗೋಲ್ಡನ್ ಗೇಟ್ ಮುಂಭಾಗದಲ್ಲಿ ಕುಳಿತು ಶಾಂತಿಯುತ ಪ್ರತಿಭಟನೆ ಆರಂಭಿಸಿದರು. ಬೆಂಗಳೂರು ವಕೀಲರ ಸಂಘದ (ಎಎಬಿ) ಪದಾಧಿಕಾರಿಗಳು, ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ ಎಚ್.ಎಲ್.ವಿಶಾಲ ರಘು, ಹೈಕೋರ್ಟ್‌ನ ಪದಾಂಕಿತ ಹಿರಿಯ ಹಾಗೂ ಕಿರಿಯ ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಯಾವುದೇ ಹಿರಿ–ಕಿರಿಯ ವಕೀಲರು ಕಲಾಪಗಳಿಗೆ ಹಾಜರಾಗದಂತೆ ಕೋರ್ಟ್ ಪ್ರವೇಶಿಸುವ ವಕೀಲರಿಗೆ ಮನವಿ ಮಾಡಿದರು. ಇದರಿಂದಾಗಿ ದಿನದ ಕೋರ್ಟ್ ಕಲಾಪಗಳು ಬಹುತೇಕ ಸ್ಥಗಿತಗೊಂಡಿದ್ದವು.
ಪತ್ರ: ಇದೇ ವೇಳೆ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಸ್.ಎಸ್.ಮಿಟ್ಟಲಕೋಡ್, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರವೊಂದನ್ನು ಬರೆದಿದ್ದು ವರ್ಗಾವಣೆ ಶಿಫಾರಸನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.