ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಎ.ಎಂ.ಪ್ರಸಾದ್, ಆಯುಕ್ತರಾಗಿ ಕೆ. ಬದ್ರುದ್ದೀನ್, ಎಸ್. ರಾಜಶೇಖರ್, ಡಾ. ಹರೀಶ್ ಕುಮಾರ್, ಎಸ್. ರಾಮನ್, ರುದ್ರಣ್ಣ ಹರ್ತಿಕೋಟೆ, ಬಿ.ಆರ್. ಮಮತಾ, ನಾರಾಯಣ ಜಿ. ಚನ್ನಾಳ ಅವರು ಪ್ರಮಾಣ ಸ್ವೀಕರಿಸಿದರು. ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರಮಾಣ ವಚನ ಬೋಧಿಸಿದರು.
ಬೆಂಗಳೂರು: ‘ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಮುಖ್ಯ ಆಯುಕ್ತರಾಗಿ ಎ.ಎಂ.ಪ್ರಸಾದ್ ಹಾಗೂ ಆಯುಕ್ತರಾಗಿ ಕೆ.ರಾಮನ್, ಡಾ.ಹರೀಶ್ ಕುಮಾರ್, ರುದ್ರಣ್ಣ ಹರ್ತಿಕೋಟೆ, ನಾರಾಯಣ ಜಿ.ಚನ್ನಾಳ, ಎಸ್.ರಾಜಶೇಖರ, ಕೆ.ಬದ್ರುದ್ದೀನ್ ಮತ್ತು ಬಿ.ಆರ್.ಮಮತಾ ಅವರ ನೇಮಕಾತಿಯು ನ್ಯಾಯಪೀಠದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ’ ಎಂದು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಹುದ್ದೆಯ ಆಕಾಂಕ್ಷಿಯಾಗಿದ್ದ ಜೆ.ಪಿ.ನಗರ 7ನೇ ಹಂತದ ನಿವಾಸಿಯಾದ ಸಾಮಾಜಿಕ ಕಾರ್ಯಕರ್ತ ಕೆ.ಮಲ್ಲಿಕಾರ್ಜುನ ರಾಜು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
‘ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ದಾಖಲೆಗಳನ್ನು ಸಲ್ಲಿಸಿದ ಬಳಿಕ ಸೂಕ್ತ ಆದೇಶ ಹೊರಡಿಸಲಾಗುವುದು’ ಎಂದು ತಿಳಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ ಮತ್ತು ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 10ಕ್ಕೆ ಮುಂದೂಡಿದೆ.
ಅರ್ಜಿದಾರರ ಪರ ಹೈಕೋರ್ಟ್ ವಕೀಲ ಅಶೋಕ್ ಪಾಟೀಲ್, ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಹಾಗೂ ಪ್ರತಿವಾದಿ, ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಎ.ಎಂ. ಪ್ರಸಾದ್ ಪರ ಪದಾಂಕಿತ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.