ADVERTISEMENT

High Court Of Karnataka: ಕನ್ನಡ ಸಾಹಿತ್ಯ ಪರಿಷತ್ತಿನ ಅರ್ಜಿ ವಿಚಾರಣೆ 21ಕ್ಕೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 16:25 IST
Last Updated 17 ಜುಲೈ 2025, 16:25 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) 2023-24ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಸಭೆ ರದ್ದುಪಡಿಸಿರುವ, ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳ ಕುರಿತು ವಿಚಾರಣೆ ನಡೆಸುವ ಸಹಕಾರ ಸಂಘಗಳ ಉಪ ನಿಬಂಧಕರ ಕ್ರಮವನ್ನು ಪ್ರಶ್ನಿಸಿ ಕನ್ನಡ ಸಾಹಿತ್ಯ ಪರಿಷತ್ತು ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ಇದೇ 21ಕ್ಕೆ ವಿಚಾರಣೆ ನಡೆಸಲಿದೆ.

ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿ ಸಲ್ಲಿಸಿರುವ ರಿಟ್‌ ಅರ್ಜಿಯು ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ಗುರುವಾರ ಮೂರನೇ ಬಾರಿಗೆ ದಿನದ ಕಲಾಪ ಪಟ್ಟಿಯಲ್ಲಿ ವಿಚಾರಣೆಗೆ ನಿಗದಿಯಾಗಿತ್ತು.  

ಆದರೆ, ಕಲಾಪ ಮುಕ್ತಾಯದ ವೇಳೆಯಾದರೂ ಅರ್ಜಿ ವಿಚಾರಣೆ ಹಂತಕ್ಕೆ ತಲುಪಲಿಲ್ಲ. ಹೀಗಾಗಿ, ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್‌ ನ್ಯಾಯಪೀಠಕ್ಕೆ ತುರ್ತು ನಿವೇದನೆ ಮಾಡಿ, ‘ಸ್ವಾಯತ್ತ ಮತ್ತು ಕನ್ನಡದ ಪ್ರಾತಿನಿಧಿಕ ಸಂಸ್ಥೆಯ ವಿರುದ್ಧ ಸಹಕಾರ ಸಂಘಗಳ ಉಪ ನಿಬಂಧಕರು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಕ್ರಮ ಕೈಗೊಂಡಿದ್ದಾರೆ. ಅರ್ಜಿಯ ತುರ್ತು ವಿಚಾರಣೆ ಅಗತ್ಯವಿದೆ’ ಎಂದು ವಿವರಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿಯನ್ನು ಇದೇ 21ಕ್ಕೆ ವಿಚಾರಣೆಗೆ ನಿಗದಿಗೊಳಿಸಿತು.

ADVERTISEMENT

‘ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿ 2ನೇ ವಲಯ ಬೆಂಗಳೂರು ನಗರ ಜಿಲ್ಲಾ ಇವರು 2025ರ ಜೂನ್ 26 ಹಾಗೂ 30ರಂದು ಹೊರಡಿಸಿರುವ ಆದೇಶಗಳನ್ನು ರದ್ದುಪಡಿಸಬೇಕು’ ಎಂದು ಕೋರಿ ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.