ADVERTISEMENT

ಸಿಎಜಿ ವರದಿ ಹಾಜರುಪಡಿಸಲು ನಿರ್ದೇಶನ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 16:28 IST
Last Updated 26 ಜುಲೈ 2021, 16:28 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: 2016ರ ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಮಂಗಳೂರು ನಗರ ಪಾಲಿಕೆ ಪಾಲನೆ ಮಾಡಿರುವುದಕ್ಕೆ ಮಹಾಲೇಖಪಾಲರು (ಸಿಎಜಿ) ವರದಿಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿರುವ ಭಾಗವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮಂಗಳೂರು ಪಾಲಿಕೆ ಸಲ್ಲಿಸಿದ್ದ ಅಫಿಡವಿಟ್ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

ಮಂಗಳೂರಿನ ಫಲ್ಗುಣಿ ನದಿ ಮಾಲಿನ್ಯಗೊಂಡಿರುವ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿ(ಕೆಎಸ್‌ಪಿಸಿಬಿ) ಸಲ್ಲಿಸಿರುವ ವರದಿಗೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸುವಂತೆ ಈ ಹಿಂದಿನ ವಿಚಾರಣೆ ವೇಳೆ ಪಾಲಿಕೆಗೆ ಪೀಠ ನಿರ್ದೇಶನ ನೀಡಿತ್ತು.

ADVERTISEMENT

‘ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಪಾಲಿಕೆಗಳಲ್ಲಿ ಮಂಗಳೂರು ಕೂಡ ಒಂದು ಎಂದು ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿದೆ’ ಎಂದು ಪಾಲಿಕೆ ಆಯುಕ್ತರು ಅಫಿಡವಿಟ್‌ನಲ್ಲಿ ತಿಳಿಸಿದ್ದರು. ‘ಸಿಎಜಿ ವರದಿಯಲ್ಲಿ ಮಂಗಳೂರು ಪಾಲಿಕೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದ್ದರೆ, ಅದನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು’ ಎಂದು ಪೀಠ ತಿಳಿಸಿತು. ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.