ADVERTISEMENT

ಪಿಎಸ್‌ಐ ಪರೀಕ್ಷೆ ಪ್ರಕರಣ: ವಿಚಾರಣೆಗೆ ಹೈಕೋರ್ಟ್ ಅಸ್ತು

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 15:54 IST
Last Updated 22 ಆಗಸ್ಟ್ 2025, 15:54 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ತನ್ನ ತಮ್ಮನನ್ನು ಪೊಲೀಸ್​ ಸಬ್​ ಇನ್‌ಸ್ಪೆಕ್ಟರ್‌ (ಪಿಎಸ್​ಐ) ಮಾಡುವ ಉದ್ದೇಶದಿಂದ ಆತನ ಜನ್ಮ ದಿನಾಂಕದ ಬಗ್ಗೆ ನಕಲಿ ದಾಖಲೆಗಳನ್ನು ಸಲ್ಲಿಸಿ ಲಿಖಿತ ಪರೀಕ್ಷೆ ವೇಳೆ ಅವನ ಪಕ್ಕದಲ್ಲೇ ಕುಳಿತು ನೆರವಾಗಿದ್ದಾರೆ’ ಎಂಬ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬರ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಹೈಕೋರ್ಟ್​ ನಿರಾಕರಿಸಿದೆ.

‘ನನ್ನ ವಿರುದ್ಧದ ದೋಷಾರೋಪ ಪಟ್ಟಿ ರದ್ದುಪಡಿಸಬೇಕು’ ಎಂದು ಕೋರಿ ಬೆಂಗಳೂರಿನ ವಿನಯಕುಮಾರ್ ಹದ್ದಣ್ಣವರ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಈ ಪ್ರಕರಣವನ್ನು ಶೀಘ್ರವೇ ಇತ್ಯರ್ಥಗೊಳಿಸಿ’ ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.

‘ಅರ್ಜಿದಾರರು ಇಎಸ್​ಐ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದಾರೆ. ಪ್ರಕರಣ ತಾರ್ಕಿಕ ಅಂತ್ಯ ತಲುಪಿದರೆ ತಮ್ಮ ಕರ್ತವ್ಯಕ್ಕೆ ಅಡ್ಡಿಯಾಗಲಿದೆ ಎಂಬ ಕಾರಣದಿಂದ ಅವರು ಪ್ರಕರಣವನ್ನು ವಿಲಂಬಿಸಲು ಒಂದಲ್ಲಾ ಒಂದು ತಕರಾರು ಅರ್ಜಿಗಳನ್ನು ಸಲ್ಲಿಸುತ್ತಾ ನ್ಯಾಯಾಲಯದ ತಡೆಯಾಜ್ಞೆ ಪಡೆದು ಪ್ರಕರಣ ಮುಕ್ತಾಯವಾಗದಂತೆ ನೋಡಿಕೊಳ್ಳುತ್ತಿದ್ದಾರೆ’ ಎಂದು ನ್ಯಾಯಪೀಠ ನಿಷ್ಕರ್ಷಿಸಿದೆ.

ADVERTISEMENT

‘ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ಹೆಚ್ಚುವರಿ ದೋಷಾರೋಪ ಪಟ್ಟಿ ಪರಿಗಣಿಸಿ ನೀಡಿರುವ ಆದೇಶದಲ್ಲಿ ಯಾವುದೇ ದೋಷ ಕಂಡುಬಂದಿಲ್ಲ’ ಎಂಬ ಅಭಿಪ್ರಾಯದೊಂದಿಗೆ ನ್ಯಾಯಪೀಠ ವಿನಯಕುಮಾರ್ ಹದ್ದಣ್ಣವರ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಪ್ರಾಸಿಕ್ಯೂಷನ್‌ ಪರ ಎ.ವೆಂಕಟ ಸತ್ಯನಾರಾಯಣ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.