ADVERTISEMENT

ಶಿವಮೂರ್ತಿ ಶರಣರ ವಿರುದ್ಧದ ಪೊಕ್ಸೊ ಪ್ರಕರಣ: ಸಾಕ್ಷಿ ವಿಚಾರಣೆಗೆ ಹೈಕೋರ್ಟ್‌ ತಡೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 14:21 IST
Last Updated 2 ಜೂನ್ 2023, 14:21 IST
ಶಿವಮೂರ್ತಿ ಮುರುಘಾ ಶರಣರ
ಶಿವಮೂರ್ತಿ ಮುರುಘಾ ಶರಣರ   

ಬೆಂಗಳೂರು: ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರ ಎಸಗಿದ ಆರೋಪ ಮತ್ತು ಈ ಆರೋಪಕ್ಕೆ ಹೊಂದಿಕೊಂಡ ವಿವಿಧ ಗುರುತರ ಅಪರಾಧಗಳ ಅಡಿ; ವಿಚಾರಣಾ ಕೈದಿಯಾಗಿ ಜೈಲಿನಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ಚಿತ್ರದುರ್ಗ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿರುವ ಕ್ರಿಮಿನಲ್‌ ಪ್ರಕರಣಗಳ ಸಾಕ್ಷಿ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ಜುಲೈ 1ರವರೆಗೆ ತಡೆ ನೀಡಿದೆ.

ಈ ಸಂಬಂಧ ಆರೋಪಿ ಶಿವಮೂರ್ತಿ ಮುರುಘಾ ಶರಣರು ಸಲ್ಲಿಸಿರುವ ಎರಡು ಕ್ರಿಮಿನಲ್‌ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಆರೋಪಿ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್‌, ‘ಆರೋಪಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲಾ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಶರಣರ ವಿರುದ್ಧ ದೋಷಾರೋಪ ಹೊರಿಸಿ ಸಾಕ್ಷಿ ವಿಚಾರಣೆ ನಡೆಸಲು 2023ರ ಏಪ್ರಿಲ್‌ 20ರಂದು ಆದೇಶಿಸಿದೆ. ಈ ಆದೇಶ ದೋಷಪೂರಿತವಾಗಿದ್ದು ಇದಕ್ಕೆ ತಡೆ ನೀಡಬೇಕು‘ ಎಂದು ಕೋರಿದರು.

ADVERTISEMENT

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಚಿತ್ರದುರ್ಗ ಸೆಷನ್ಸ್‌ ನ್ಯಾಯಾಲಯದಲ್ಲಿನ ವಿಚಾರಣೆಯ ಮುಂದಿನ ಪ್ರಕ್ರಿಯೆಗೆ 2023ರ ಜುಲೈ 1ರವರೆಗೆ ತಾತ್ಕಾಲಿಕ ತಡೆ ನೀಡಿ ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿತು.  

ಪ್ರಕರಣವೇನು?: ಶಿವಮೂರ್ತಿ ಶರಣರ ವಿರುದ್ಧ ಪೊಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ–2012, ಭಾರತೀಯ ದಂಡ ಸಂಹಿತೆ–1860, ಧಾರ್ಮಿಕ ಸಂಸ್ಥೆಗಳ ದುರುಪಯೋಗ ತಡೆ ಕಾಯ್ದೆ-1988, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮೇಲಿನ ದೌರ್ಜನ್ಯ ತಡೆ ಕಾಯ್ದೆ–1989 ಮತ್ತು ಬಾಲ ನ್ಯಾಯ (ಮಕ್ಕಳ ಸಂರಕ್ಷಣೆ ಹಾಗೂ ಆರೈಕೆ) ಕಾಯ್ದೆ–2015ರ ವಿವಿಧ ಕಲಂಗಳ ಅಡಿಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದ್ದು ಸೆಷನ್ಸ್‌ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿದೆ. 

‘ಶರಣರು ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಆರೋಪಿಸಿ ಇಬ್ಬರು ಬಾಲಕಿಯರು ಮೈಸೂರಿನ ನಜರ್‌ಬಾದ್ ಪೊಲೀಸ್‌ ಠಾಣೆಯಲ್ಲಿ 2022ರ ಆಗಸ್ಟ್‌ 26ರಂದು ದೂರು ದಾಖಲಿಸಿದ ನಂತರ ಪೊಲೀಸರು ಶರಣರನ್ನು 2022ರ ಸೆಪ್ಟೆಂಬರ್ 1ರಂದು ಚಿತ್ರದುರ್ಗದ ಬೃಹನ್ಮಠದಲ್ಲಿ ಬಂಧಿಸಿದರು. ಅಂದಿನಿಂದಲೂ ಅವರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು (ವಿಚಾರಣಾಧೀನ ಬಂದಿ ಸಂಖ್ಯೆ: 2261) ಕಾನೂನು ವಿಚಾರಣೆಯ ವಿವಿಧ ಹಂತಗಳ ಪ್ರಕ್ರಿಯೆಯನ್ನು ಎದುರಿಸುತ್ತಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.