ADVERTISEMENT

ಗಾಯಕ ಸೋನು ನಿಗಮ್‌ ಅರ್ಜಿ: ವಿಚಾರಣೆ 15ಕ್ಕೆ ಮುಂದೂಡಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 13 ಮೇ 2025, 16:09 IST
Last Updated 13 ಮೇ 2025, 16:09 IST
ಸೋನು ನಿಗಮ್‌ 
ಸೋನು ನಿಗಮ್‌    

ಬೆಂಗಳೂರು: ‘ಕನ್ನಡದ ಅಭಿಮಾನವನ್ನು ಪಹಲ್ಗಾಮ್‌ ಘಟನೆಗೆ ತಳುಕು ಹಾಕಿದ ಆರೋಪ ಹೊರಿಸಿ ನನ್ನ ವಿರುದ್ಧ ದಾಖಲಿಸಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಕೋರಿ ಗಾಯಕ ಸೋನು ನಿಗಮ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಇದೇ 15ಕ್ಕೆ ಮುಂದೂಡಿದೆ.

‘ನನ್ನ ವಿರುದ್ಧ ಬೆಂಗಳೂರಿನ ಅವಲಹಳ್ಳಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಕೋರಿ ಮುಂಬೈನ ಸೋನು ನಿಗಮ್‌ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ನಾಯಮೂರ್ತಿ ಶಿವಶಂಕರ ಅಮರಣ್ಣವರ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸೋನು ನಿಗಮ್‌ ಪರ ಹೈಕೋರ್ಟ್‌ ವಕೀಲೆ ಕವಿತಾ ದಾಮೋದರನ್‌ ವಾದ ಮಂಡಿಸಲು ಮುಂದಾದರು. ಆಗ ನ್ಯಾಯಪೀಠವು, ‘ಕಚೇರಿ ಆಕ್ಷೇಪಣೆಗೆ ಸಂಬಂಧಿಸಿದಂತೆ ವಕೀಲೆಯ ವಾದವನ್ನು ದಾಖಲಿಸಲಾಗಿದ್ದು, ವಿಚಾರಣೆಯನ್ನು ಇದೇ 15ಕ್ಕೆ ಮುಂದೂಡಲಾಗಿದೆ’ ಎಂದು ಆದೇಶಿಸಿತು.

ADVERTISEMENT

ಅರ್ಜಿಯಲ್ಲಿ ದೂರುದಾರ ‘ಕರ್ನಾಟಕ ರಕ್ಷಣಾ ವೇದಿಕೆ’ಯ (ನಾರಾಯಣಗೌಡ ಬಣ) ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ.ಧರ್ಮರಾಜ ಮತ್ತು ರಾಜ್ಯ ಪ್ರಾಸಿಕ್ಯೂಷನ್‌ ಅನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಪ್ರಕರಣವೇನು?: ‘ಸೋನು ನಿಗಮ್‌ ಅವರು ‘ಈಸ್ಟ್‌ ಪಾಯಿಂಟ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಅಂಡ್‌ ಟೆಕ್ನಾಲಜಿ’ಯಲ್ಲಿ ನಡೆದಿದ್ದ ಸಂಗೀತ ಕಾರ್ಯಕ್ರಮದಲ್ಲಿ ಆಕ್ಷೇಪಾರ್ಹ ಮತ್ತು ಕನ್ನಡಿಗರ ಭಾವನೆ ಕೆರಳಿಸುವ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಧರ್ಮರಾಜ  ಇದೇ 2ರಂದು ದೂರು ನೀಡಿದ್ದರು. ತನಿಖೆಗೆ ಹಾಜರಾಗುವಂತೆ ಸೋನು ನಿಗಮ್‌ ಅವರಿಗೆ ಅವಲಹಳ್ಳಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದರು.  

ರನ್ಯಾರಾವ್‌ ಹೇಬಿಯಸ್‌ ಕಾರ್ಪಸ್‌ ಅರ್ಜಿ: ಆಕ್ಷೇಪಣೆಗೆ ಗಡುವು

‘ಅಕ್ರಮ ಚಿನ್ನ ಸಾಗಣೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರಿಗೆ ಕಾಫಿಪೋಸಾ ಕಾಯ್ದೆ ಅನ್ವಯಿಸಿ ಬಂಧನದಲ್ಲಿ ಇರಿಸಿರುವುದು ಕಾನೂನುಬಾಹಿರ ಮತ್ತು ಈ ಕ್ರಮವನ್ನು ಅನೂರ್ಜಿತ ಎಂದು ಘೋಷಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌, ಕೇಂದ್ರ ಸರ್ಕಾರಕ್ಕೆ ಎರಡು ವಾರಗಳ ಗಡುವು ನೀಡಿದೆ.

ಈ ಸಂಬಂಧ ರನ್ಯಾ ರಾವ್ ತಾಯಿ ಎಚ್.ಪಿ.ರೋಹಿಣಿ (58) ಸಲ್ಲಿಸಿರುವ ಹೇಬಿಯಸ್‌ ಕಾರ್ಪಸ್‌ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ನೇತೃತ್ವದ ರಜಾಕಾಲದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಚಂದ್ರಶೇಖರ್‌, ‘ಅರ್ಜಿದಾರರನ್ನು ಬಂಧಿಸುವ ಮುನ್ನ ಅನುಸರಿಸಬೇಕಾದ ನ್ಯಾಯಿಕ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಪಾಲನೆ ಮಾಡಿಲ್ಲ. ಸಕ್ಷಮ ಪ್ರಾಧಿಕಾರದ ಗಮನಕ್ಕೆ ತಾರದೆ ರನ್ಯಾ ರಾವ್ ಅವರನ್ನು, ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ–1974ರ (ಕಾಫಿಪೋಸಾ) ಅಡಿಯಲ್ಲಿ ಬಂಧಿಸಲಾಗಿದೆ. ಇದು ಕಾನೂನು ಬಾಹಿರ. ಆದ್ದರಿಂದ, ಬಂಧನವನ್ನು ಕಾನೂನು ಬಾಹಿರ ಎಂದು ಘೋಷಿಸಿ. ಕೂಡಲೆ ರನ್ಯಾ ಅವರನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಮನವಿ ಮಾಡಿದರು.

ಕೇಂದ್ರ ಸರ್ಕಾರದ ಪರ ಹಾಜರಿದ್ದ ಡೆಪ್ಯುಟಿ ಸಾಲಿಸಿಟರ್‌ ಜನರಲ್‌ ಎಚ್‌.ಶಾಂತಿಭೂಷಣ್‌, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಎರಡು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್‌ 3ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.