ADVERTISEMENT

ಪ್ರೌಢಶಾಲೆ ಇಂದಿನಿಂದ ಪುನರಾರಂಭ‌: ಹೈಕೋರ್ಟ್ ಆದೇಶ ಪಾಲನೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2022, 20:06 IST
Last Updated 13 ಫೆಬ್ರುವರಿ 2022, 20:06 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ರಾಜ್ಯದಾದ್ಯಂತ 9 ಮತ್ತು 10ನೇ ತರಗತಿಗಳು ಸೋಮವಾರ (ಫೆ. 14) ಮತ್ತೆ ಆರಂಭವಾಗಲಿದೆ. ಆದರೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಮಂಗಳವಾರದವರೆಗೆ ರಜೆ ವಿಸ್ತರಿಸಲಾಗಿದೆ. ಶಾಲಾ– ಕಾಲೇಜುಗಳಲ್ಲಿ ಹಿಜಾಬ್‌– ಕೇಸರಿ ಶಾಲು ವಿವಾದ ಭುಗಿಲೆದ್ದ ಕಾರಣ ರಜೆ ಘೋಷಿಸಲಾಗಿತ್ತು.

ಈ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸ
ಬೇಕು. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂಶಿಕ್ಷಣ ಇಲಾಖೆ ಅಧಿಕಾರಿಗಳು ಸಮನ್ವಯದಿಂದ, ಸೌಹಾರ್ದದ ವಾತಾವರಣ ಮೂಡಿಸಲು ಶಾಲೆಗಳಿಗೆ ಭೇಟಿ ನೀಡಬೇಕು, ಶಾಂತಿ ಸಭೆಗಳನ್ನು ನಡೆಸಬೇಕು ಎಂದು ಸರ್ಕಾರ ಸೂಚಿಸಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

‘ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ದಾಖಲಾಗಿರುವ ರಿಟ್ ಅರ್ಜಿಗಳ ವಿಚಾರಣೆ ಇತ್ಯರ್ಥ ಆಗುವತನಕ ವಿದ್ಯಾರ್ಥಿಗಳು ಕೇಸರಿ ಶಾಲು, ಹಿಜಾಬ್ ಧರಿಸಿ ತರಗತಿಗಳಿಗೆ ಪ್ರವೇಶಿಸುವಂತಿಲ್ಲ. ಧಾರ್ಮಿಕ ಸಂಕೇತದ ಬಾವುಟಗಳನ್ನು ಪ್ರದರ್ಶನ ಮಾಡುವಂತಿಲ್ಲ’ ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಸ್ಪಷ್ಟಪಡಿಸಿದೆ. ವಿಚಾರಣೆ ಫೆ. 14 ರಂದು ಮುಂದುವರಿಯಲಿದೆ.

ADVERTISEMENT

ಸರ್ಕಾರದ ಸೂಚನೆಯ ಅನ್ವಯ, ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆಯಾ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ‌ಶಿಕ್ಷಣ ಇಲಾಖೆ, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಪೊಲೀಸ್ ಇಲಾಖೆ ಸಹಕಾರದಲ್ಲಿ ತರಗತಿ‌ಗಳನ್ನು ಆರಂಭಿಸಬೇಕು. ಶಾಲೆಗಳಲ್ಲಿ ಶಾಂತಿ ಕಾಪಾಡಲು ಪೋಷಕರ ಹಾಗೂ ಶಾಲಾ ಮೇಲುಸ್ತುವಾರಿ ಅಭಿವೃದ್ಧಿ ಸಮಿತಿಯ (ಎಸ್‌ಡಿಎಂಸಿ) ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.