ಈರಣ್ಣ ಕಡಾಡಿ
ನವದೆಹಲಿ: ಮಧುಬಲೆ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನಿರ್ದೇಶನ ನೀಡಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಗ್ರಹಿಸಿದರು.
ರಾಜ್ಯಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ‘48 ಮಂದಿಯನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವರೇ ವಿಧಾನಸಭೆಯಲ್ಲಿ ಅಲವತ್ತುಕೊಂಡಿದ್ದಾರೆ. ಇದೊಂದು ಆಘಾತಕಾರಿ ಬೆಳವಣಿಗೆ. ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು’ ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ವ್ಯಾಪಕ ಚಿನ್ನ ಕಳ್ಳಸಾಗಣೆ ನಡೆಯುತ್ತಿದ್ದು, ಇದರಲ್ಲಿ ಹಲವು ಸಚಿವರು ಭಾಗಿಯಾಗಿದ್ದಾರೆ ಎಂಬ ಆರೋಪ ಇದೆ. ಇದರ ಬಗ್ಗೆಯೂ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
‘ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಲು ಬೆಳಗಾವಿ, ಮೈಸೂರು ಮತ್ತು ಕಲಬುರಗಿಯಲ್ಲಿ 6 ತಿಂಗಳೊಳಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬೇಕೆಂದು ಹೈಕೋರ್ಟ್ ಆದೇಶ ಹೊರಡಿಸಿತ್ತು. ಆದರೆ, ನ್ಯಾಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ಮೀನಮೇಷ ಎಣಿಸುತ್ತಿದೆ’ ಎಂದು ಆರೋಪಿಸಿದರು.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ, ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ, ಹಂಪಿಯಲ್ಲಿ ವಿದೇಶಿ ಪ್ರವಾಸಿಗರ ಹತ್ಯೆ, ಮೈಸೂರಿನ ಉದಯಗಿರಿ ಠಾಣೆಯ ಮೇಲೆ ದಾಳಿ ನಡೆಯಲು ಸರ್ಕಾರದ ವೈಫಲ್ಯವೇ ಕಾರಣ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.