ADVERTISEMENT

ಇಂದು ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಮಾರ್ಚ್ 2022, 6:02 IST
Last Updated 20 ಮಾರ್ಚ್ 2022, 6:02 IST
ಗುಡುಗು ಸಹಿತ ಮಳೆ
ಗುಡುಗು ಸಹಿತ ಮಳೆ   

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದ ಕೆಲವೆಡೆ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗನಲ್ಲಿ ಮಳೆಯಾಗುವ ಸಂಭವವಿದೆ.

ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಹಾಗೂ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ADVERTISEMENT

ಮೀನುಗಾರರರಿಗೆ ಮುಂದಿನ 24 ಗಂಟೆಗಳಲ್ಲಿ ಹವಾಮಾನದ ಬಗ್ಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ. ರಾಯಚೂರಿನಲ್ಲಿ ಗರಿಷ್ಠ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೇ, ದಾವಣಗೆರೆಯಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಇನ್ನು ನಿನ್ನೆ (ಮಾ.19) ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರವಾಗಿ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಕೆಲವೆಡೆ ಆಲಿಕಲ್ಲು ಸಮೇತ ಮಳೆ ಸುರಿದಿದೆ.

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಹನಸೋಗೆ ಗ್ರಾಮದ ರೈತ ಸಿದ್ದಲಿಂಗನಾಯಕ (72) ಅವರು ಜಮೀನಿನ ಬಳಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ.ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಿರುಗಾಳಿ ಸಹಿತ ಮಳೆಗೆ ಮರದ ರೆಂಬೆ ಬಿದ್ದು ಮಲ್ಲಮ್ಮ (53) ಅಸುನೀಗಿದ್ದಾರೆ.

ವಿವಿಧ ಗ್ರಾಮಗಳಲ್ಲಿ ಮನೆಗಳ ಚಾವಣಿ, ಹೆಂಚುಗಳು ಹಾನಿಗೊಂಡಿವೆ. ವಿದ್ಯುತ್‌ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಹೊಳೆನರಸೀಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಸಿಡಿಲು ಬಡಿದು ಟ್ರಾಕ್ಟರ್ ಮಂಜು ಅವರ ಎತ್ತು ಮೃತಪಟ್ಟಿದೆ. ಉತ್ತರ ಕರ್ನಾಟಕದ ಕೆಲವೆಡೆಯೂ ಗುಡುಗು, ಸಿಡಿಲಿನಿಂದ ಮಳೆ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.