
ನವದೆಹಲಿ: ಕರ್ನಾಟಕದ ಒಂಬತ್ತು ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆ ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪೀಯೂಷ್ ಗೋಯಲ್ ಅವರೊಂದಿಗೆ ಗುರುವಾರ ಚರ್ಚೆ ನಡೆಸಿದರು.
ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ದಕ್ಷಿಣ ಕನ್ನಡ, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆ ಅನುಷ್ಠಾನ ಮಾಡಬೇಕೆಂದು ಕೋರಿದರು.
ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆ ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶವನ್ನು ಸಚಿವ ಗೋಯಲ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು. ನನ್ನ ಪ್ರಸ್ತಾವನೆಗೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ರಾಜ್ಯದ ಕೈಗಾರಿಕಾಭಿವೃದ್ಧಿಗೆ ಕೈಜೋಡಿಸುವುದಾಗಿ ಭರವಸೆ ನೀಡಿದರು ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.
ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಸಾಗಾಣಿಕೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಬಂದರೆ ಇಡೀ ರಾಜ್ಯಕ್ಕೆ ಸಮಗ್ರವಾಗಿ ಅನುಕೂಲ ಆಗುತ್ತದೆ. ಮುಖ್ಯವಾಗಿ ಈ ಪ್ರದೇಶಗಳು ಸಾಮೂಹಿಕವಾಗಿ ದೊಡ್ಡ ಮಟ್ಟದಲ್ಲಿ ಕೈಗಾರಿಕಾ ಅಭಿವೃದ್ಧಿ ಕಾಣುವುದಲ್ಲದೆ, ಸಮತೋಲಿತ ಪ್ರಾದೇಶಿಕ ಬೆಳವಣಿಗೆಗೆ ಕಾಣಿಕೆ ನೀಡುತ್ತವೆ ಎಂದು ಕುಮಾರಸ್ವಾಮಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.