
ಬೆಂಗಳೂರು: ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಮೂರೂವರೆ ದಶಕಗಳ ಹೋರಾಟಕ್ಕೆ ನ್ಯಾಯ ಸಿಕ್ಕಿದೆ. ಶೇ 15ರ ಮಿತಿಯಲ್ಲಿ ಅನುಷ್ಠಾನಗೊಳಿಸುವ ಕುರಿತು ಶೀಘ್ರ ನಿರ್ಧಾರಕ್ಕೆ ಬರಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಹೈಕೋರ್ಟ್‌ನ ಅಂತಿಮ ಆದೇಶಕ್ಕೆ ಒಳಪಟ್ಟು ಶೇ 15ರಷ್ಟು ಮೀಸಲಾತಿ ಅನುಸರಿಸಿ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸಂಪುಟ ಅನುಮೋದನೆ ನೀಡಿದೆ. ಈ ಕುರಿತು ಸಚಿವರಾದ ಜಿ.ಪರಮೇಶ್ವರ, ಎಚ್.ಸಿ.ಮಹದೇವಪ್ಪ, ಸತೀಶ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಜತೆ ಚರ್ಚೆ ನಡೆಸಲಾಗಿದೆ. ಅಧಿಸೂಚನೆ ಹೊರಡಿಸುವಾಗ ಅಂತಿಮ ನಿರ್ಧಾರ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಒಳಮೀಸಲಾತಿ ಜಾರಿಯಾಗುತ್ತಿದ್ದು, ಯಾವ ಸಮುದಾಯಗಳೂ ಗೊಂದಲಕ್ಕೆ ಒಳಗಾಗಬಾರದು. ಅನವಶ್ಯಕ ಹೇಳಿಕೆಗಳನ್ನು ನೀಡಬಾರದು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.