ಬೆಂಗಳೂರು: ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಬುಡಕಟ್ಟು ಉಪಯೋಜನೆ (ಟಿಎಸ್‌ಪಿ) ಅನುಷ್ಠಾನ ಪ್ರಗತಿ ಕುರಿತು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ (ಐಸೆಕ್) ನಡೆಸಿದ ಅಧ್ಯಯನ ವರದಿ ಪ್ರಕಾರ ಪರಿಶಿಷ್ಟರ ಆರೋಗ್ಯ, ಶಿಕ್ಷಣ, ಜೀವನಮಟ್ಟ ಸುಧಾರಣೆ, ಬಡತನ ನಿರ್ಮೂಲನೆಯಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದಲ್ಲಿ ಶನಿವಾರ ನಡೆದ ರಾಜ್ಯ ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಜಾರಿಗೊಂಡು ದಶಕ ಪೂರೈಸಿದೆ. ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲ್ಲೂಕುಗಳಲ್ಲಿ ಅಧ್ಯಯನ ಕೈಗೊಳ್ಳಲಾಗಿದೆ. ವಿವಿಧ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ಪ್ರಕಾರ ಕರ್ನಾಟಕ ವಾರ್ಷಿಕ ಶೇ 9.6 ರಷ್ಟು ಪ್ರಗತಿ ಸಾಧಿಸಿದೆ ಎಂದರು.
‘ಕಾಯ್ದೆ ಪ್ರಕಾರ ಪ್ರತಿವರ್ಷ ಶೇ 24.1ರಷ್ಟು ಅನುದಾನ ನೀಡಬೇಕಾಗಿದೆ. ಆದರೆ, 2019-20ರ ಅವಧಿಯಲ್ಲಿ ನಿಗದಿತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ₹2.97 ಲಕ್ಷ ಕೋಟಿ, ವಸತಿ ಯೋಜನೆಗಳಿಗೆ ₹1,086 ಕೋಟಿ ವೆಚ್ಚ ಮಾಡಲಾಗಿದೆ’ ಎಂದು ಹೇಳಿದರು.
ಕಲ್ಯಾಣ ಯೋಜನೆಗಳಿಗೆ ಸಾಲಸೌಲಭ್ಯ ಒದಗಿಸಲು ವಿಳಂಬ ಮಾಡುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಎಲ್ಲ ಫಲಾನುಭವಿಗಳಿಗೂ ತಲುಪುವಂತೆ ಕ್ರಮ ಕೈಗೊಳ್ಳಬೇಕುಸಿದ್ದರಾಮಯ್ಯ, ಮುಖ್ಯಮಂತ್ರಿ
‘ಆಯಾ ಇಲಾಖೆಗಳು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ, ಪರಿಶಿಷ್ಟ ಸಮುದಾಯದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಶ್ರಮಿಸಬೇಕು. ಇನ್ನಷ್ಟು ಬದ್ಧತೆ ತೋರಿದ್ದರೆ 10 ವರ್ಷಗಳಲ್ಲಿ ಹೆಚ್ಚಿನ ಪ್ರಗತಿ ಸಾಧ್ಯವಿತ್ತು. ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು. ಯೋಜನೆ ಅನುಷ್ಠಾನ ಕುರಿತು ನಿರಂತರವಾಗಿ ಪರಿಶೀಲನೆ ನಡೆಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
‘ಬಿಡುಗಡೆಯಾಗದ ಕೇಂದ್ರ ಅನುದಾನ’
ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಗಳಿಗೆ 2024–25ನೇ ಸಾಲಿನಲ್ಲಿ ರಾಜ್ಯ ಸರ್ಕಾರ ₹38793 ಕೋಟಿ ಬಿಡುಗಡೆ ಮಾಡಿತ್ತು. ₹38717 ಕೋಟಿ ವೆಚ್ಚ ಮಾಡಿ ಶೇ 97ರಷ್ಟು ಪ್ರಗತಿ ಸಾಧಿಸಿದ್ದೇವೆ. ಆದರೆ ಕೇಂದ್ರದಿಂದ ಬರಬೇಕಿದ್ದ ₹880 ಕೋಟಿ ಅನುದಾನ ಬಿಡುಗಡೆಯಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
‘2025–26ನೇ ಸಾಲಿನಲ್ಲಿ ₹42017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನ ಬಳಕೆಗೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಶೇ 100ರಷ್ಟು ಪ್ರಗತಿ ಸಾಧಿಸಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಬೇಕು’ ಎಂದರು.
ದೇವದಾಸಿಯರ ಪುನರ್‌ವಸತಿಗೆ ಸಮೀಕ್ಷೆ
ದೇವದಾಸಿಯರ ಪುನರ್‌ವಸತಿ ಸಮೀಕ್ಷೆ ಕಾರ್ಯ ಸೆಪ್ಟಂಬರ್‌ನಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಹೇಳಿದರು. ದೇವದಾಸಿ ಪದ್ಧತಿಯನ್ನು ಸಂಪೂರ್ಣ ತೊಡೆದು ಹಾಕಲು ಕಾನೂನಿಗೆ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ಈ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಕೆಲವೆಡೆ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ಎಲ್ಲರೂ ತಲೆತಗ್ಗಿಸುವ ವಿಚಾರ. ದೇವದಾಸಿಯರು ಸಫಾಯಿ ಕರ್ಮಚಾರಿಗಳು ಸೇರಿದಂತೆ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.