ADVERTISEMENT

ಗ್ರಾ.ಪಂ–ಸ್ಥಳೀಯ ಸಂಸ್ಥೆ ಚುನಾವಣೆ: ಮೀಸಲು ನಿಗದಿಗೆ ಅಂತಿಮ ಗಡುವು

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 16:25 IST
Last Updated 28 ಜನವರಿ 2026, 16:25 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ನಡೆಯಬೇಕಿರುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಹಾಗೂ‌ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸುವ ಸಂಬಂಧ ಉತ್ತರಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅಂತಿಮ ಗಡುವು ನೀಡಿದೆ.

‘ಚುನಾವಣೆಗಾಗಿ ಮೀಸಲಾತಿ ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಪದಾಂಕಿತ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ‘ರಾಜ್ಯದಲ್ಲಿನ 187 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಈಗಾಗಲೇ ಪೂರ್ಣಗೊಂಡಿದೆ. ಬಹುತೇಕ ಗ್ರಾಮ ಪಂಚಾಯಿತಿಗಳ ಅವಧಿ ಮಾಸಾಂತ್ಯದಲ್ಲಿ ಪೂರ್ಣಗೊಳ್ಳಲಿದೆ. ಸಕಾಲದಲ್ಲಿ ಚುನಾವಣೆ ನಡೆಸುವುದಕ್ಕಾಗಿ, ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ಆಕ್ಷೇಪಿಸಿದರು.

ADVERTISEMENT

‘ರಾಜ್ಯದಲ್ಲಿ ಸುಮಾರು 6 ಸಾವಿರ ಗ್ರಾಮ ಪಂಚಾಯಿತಿ ಹಾಗೂ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಿದೆ. ಅವಧಿ ಪೂರ್ಣಗೊಂಡಿರುವ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಇದಕ್ಕೆ ಪ್ರತಿಯಾಗಿ ರಾಜ್ಯ ಸರ್ಕಾರದ ಪರ ವಕೀಲರು, ‘ಮೀಸಲಾತಿ ಸಿದ್ಧಪಡಿಸುವ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಅರ್ಜಿ ವಿಚಾರಣೆಯನ್ನು ಅಲ್ಪಾವಧಿಗೆ ಮುಂದೂಡಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಉತ್ತರಿಸಲು ಅಂತಿಮ ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆಬ್ರುವರಿ 5ಕ್ಕೆ ಮುಂದೂಡಿತು.

ಮನವಿ ಏನು?: ‘ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಅವಧಿ ಈ ಮಾಸಾಂತ್ಯಕ್ಕೆ ಮುಕ್ತಾಯವಾಗಲಿದೆ. ಜತೆಗೆ, ಅವಧಿ ಪೂರ್ಣಗೊಂಡಿರುವ 187 ನಗರ ಸ್ಥಳೀಯ ಸಂಸ್ಥೆಗಳಿಗೂ (47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯಿತಿ) ಚುನಾವಣೆ ನಡೆಸಬೇಕಿದೆ. ಮುಂದಿನ ಅವಧಿಗೆ ಹೊಸದಾಗಿ ಚುನಾವಣೆ ನಡೆಸಬೇಕಾದರೆ ಮೀಸಲಾತಿ ನಿಗದಿಯಾಗಬೇಕಿದೆ. ಮೀಸಲಾತಿ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ, ಸರ್ಕಾರಕ್ಕೆ ಈ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಚುನಾವಣಾ ಆಯೋಗ ಮನವಿ ಮಾಡಿದೆ.

ಮೀಸಲಾತಿ ನಿಗದಿಪಡಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಚುನಾವಣೆ ನಡೆಸುವುದು ರಾಜ್ಯ ಚುನಾವಣಾ ಆಯೋಗದ ಹೊಣೆಗಾರಿಕೆ. ಮೀಸಲಾತಿ ಅಂತಿಮಗೊಳ್ಳುವ ತನಕ ಚುನಾವಣಾ ದಿನಾಂಕ ಘೋಷಿಸಲು ಸಾಧ್ಯವಿಲ್ಲ. 
ಕೆ.ಎನ್‌.ಫಣೀಂದ್ರ ಪದಾಂಕಿತ ಹಿರಿಯ ವಕೀಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.