ADVERTISEMENT

ಉದ್ಧವ್‌ ಠಾಕ್ರೆ ಮಾತುಗಳು ಉದ್ಧಟತನದಿಂದ ಕೂಡಿವೆ: ಡಾ.ಸಿ.ಎನ್. ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 9:22 IST
Last Updated 18 ಜನವರಿ 2021, 9:22 IST
ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ
ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: 'ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮಾತುಗಳು ಉದ್ಧಟತನದಿಂದ ಕೂಡಿವೆ. ದೇಶದ ಏಕತೆ- ಸಮಗ್ರತೆಗೆ ಧಕ್ಕೆ ಉಂಟು ಮಾಡುವಂಥ ಇಂಥ ವ್ಯಕ್ತಿಯ ನೇತೃತ್ವದ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಕಾಂಗ್ರೆಸ್‌ ಪಕ್ಷ ತಕ್ಷಣ ವಾಪಸ್‌ ಪಡೆಯಬೇಕು'ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಆಗ್ರಹಿಸಿದರು.

ಮಲ್ಲೇಶ್ವರದ ಗಾಂಧಿಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿಯಂಥ ಸಾಂವಿಧಾನಿಕ, ಘನತೆಯುಳ್ಳ ಪದವಿಯಲ್ಲಿದ್ದು ಅತ್ಯಂತ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿರುವ ಉದ್ಧವ್‌ ಠಾಕ್ರೆ ಮಾತುಗಳನ್ನು ಒಪ್ಪಲು ಸಾಧ್ಯವೇ ಇಲ್ಲ. ಕರ್ನಾಟಕ– ಮಹಾರಾಷ್ಟ್ರ ನಡುವಿನ ಗಡಿ ವಿವಾದ ಎನ್ನುವುದು ಮುಗಿದ ಅಧ್ಯಾಯ’ ಎಂದರು.

‘ಹಳೆಯ ವಿಷಯವನ್ನು ಕೆದಕುತ್ತ ದೇಶದ ಏಕತೆಗೆ ಧಕ್ಕೆ ತರುವಂಥ ಕೆಲಸವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಮಾಡುತ್ತಿದ್ದಾರೆ. ಇದು ಅನಪೇಕ್ಷಿತ-ಅನಗತ್ಯ. ಕರ್ನಾಟಕ ಇಂಥ ಹೇಳಿಕೆಗಳಿಗೆ, ಬೆದರಿಕೆಗಳಿಗೆ ಬಗ್ಗುವ-ಹೆದರುವ ರಾಜ್ಯವಲ್ಲ. ನಮ್ಮ ಸಹಿಷ್ಣುತೆ, ಶಾಂತಿಪ್ರಿಯತೆಯನ್ನೇ ದೌರ್ಬಲ್ಯ ಎಂದು ಭಾವಿಸಬಾರದು. ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳಾದರೂ ಇನ್ನೂ ಗಡಿ ವಿಷಯವನ್ನು ಇಟ್ಟುಕೊಂಡು ರಾಜಕಾರಣ ಮಾಡುತ್ತಿರುವ ಶಿವಸೇನೆಯಂಥ ಪಕ್ಷಗಳು ಪ್ರಜಾಪ್ರಭುತ್ವಕ್ಕೆ ಮಾರಕ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಕಾಂಗ್ರೆಸ್‌ ನಾಯಕರು, ಅದರಲ್ಲೂ ಸಿದ್ದರಾಮಯ್ಯ ಅವರಂಥ ನಾಯಕರು ಉದ್ಧವ್‌ ಠಾಕ್ರೆ ಹೇಳಿಕೆಯನ್ನು ಖಂಡನೆ ಮಾಡಿರುವುದು ಸ್ವಾಗತಾರ್ಹ. ಕೂಡಲೇ ಅವರೆಲ್ಲರೂ ತಮ್ಮ ಪಕ್ಷದ ಹೈಕಮಾಂಡ್‌ ಮೇಲೆ ಒತ್ತಡ ಹೇರಿ ಶಿವಸೇನೆ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್‌ ಪಡೆಯುವಂತೆ ಮಾಡಬೇಕು. ಆಗ ಮಾತ್ರ ಕರ್ನಾಟಕದ ಕುರಿತ ಕಾಂಗ್ರೆಸ್‌ ಪಕ್ಷದ ಬದ್ಧತೆ ಏನೆಂಬುದು ಜನರಿಗೆ ಗೊತ್ತಾಗುತ್ತದೆ’ ಎಂದು ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

ನಾವು ಭಾರತೀಯರು: ‘ಭಾರತ ಇವತ್ತು ಬದಲಾಗಿದೆ. ಸಂಘಟಿತವಾಗಿ ಹೊರಗಿನ ಶಕ್ತಿಗಳನ್ನು ಎದುರಿಸುತ್ತ ವೇಗವಾಗಿ ಪ್ರಗತಿ ಹೊಂದುತ್ತಿದೆ. ಇಂಥ ಸಂದರ್ಭದಲ್ಲಿ ಸಂಕುಚಿತ ವಿಷಯಗಳನ್ನೂ, ಅದರಲ್ಲೂ ಎಂದೋ ಮುಗಿದ ಅಧ್ಯಾಯವನ್ನು ಇಟ್ಟುಕೊಂಡು ನೆಮ್ಮದಿ ಕೆಡಿಸುವಂಥ ಕೆಲಸ ಮಾಡಬಾರದು. ಒಂದು ರಾಜ್ಯದ ಮುಖ್ಯಮಂತ್ರಿ ಪದವಿಯಲ್ಲಿ ಕೂತ ವ್ಯಕ್ತಿಗೆ ಇದು ಶೋಭೆಯಲ್ಲ’ ಎಂದೂ ಉಪ ಮುಖ್ಯಮಂತ್ರಿ ಖಾರವಾಗಿ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.