ಸಾಂದರ್ಭಿಕ ಚಿತ್ರ
ಬೆಂಗಳೂರು: ತಜ್ಞ ವೈದ್ಯರ ಕೊರತೆ ನೀಗಿಸಲು ಮುಂದಾಗಿರುವ ವೈದ್ಯಕೀಯ ಶಿಕ್ಷಣ ಇಲಾಖೆ, ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 65ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.
ಇಲಾಖೆಯಡಿ 22 ಸ್ವಾಯತ್ತ ವೈದ್ಯಕೀಯ ಕಾಲೇಜುಗಳು ಹಾಗೂ 10 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ಸಂಸ್ಥೆಗಳಲ್ಲಿ ಒಟ್ಟು 508 ಸೂಪರ್ ಸ್ಪೆಷಾಲಿಟಿ ಹುದ್ದೆಗಳು ಮಂಜೂರಾಗಿದ್ದು, 232 ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. 276 ಹುದ್ದೆಗಳು ಖಾಲಿಯಿವೆ. ರಾಜ್ಯದಲ್ಲಿ ಸೂಪರ್ ಸ್ಪೆಷಾಲಿಟಿ ವೈದ್ಯರ ಕೊರತೆಯಿಂದ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಬೋಧನೆ ಹಾಗೂ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಸಮಸ್ಯೆಯಾಗುತ್ತಿದೆ. ಆದ್ದರಿಂದ ತಜ್ಞ ವೈದ್ಯರ ವಯೋ ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇಲಾಖೆಯು ರಾಜ್ಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವ ಸಂಬಂಧ ಡಾ.ಸಿ.ಎನ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿತ್ತು. ಈ ಸಮಿತಿಯು ಸೂಪರ್ ಸ್ಪೆಷಾಲಿಟಿ ವೈದ್ಯರ ವಯೋ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಶಿಫಾರಸು ಮಾಡಿತ್ತು.
ಸೂಪರ್ ಸ್ಪೆಷಾಲಿಟಿ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 232 ತಜ್ಞ ವೈದ್ಯರಲ್ಲಿ, 34 ಮಂದಿ ಪ್ರಸಕ್ತ ಸಾಲಿನಲ್ಲಿ 60 ವರ್ಷ ಪೂರ್ಣಗೊಳಿಸುತ್ತಿದ್ದಾರೆ. ಈ ವೈದ್ಯರನ್ನು ಹಾಲಿ ವೇತನ ಶ್ರೇಣಿಯಲ್ಲಿಯೇ ನಿವೃತ್ತಿ ಹೊಂದುವವರೆಗೆ ಮುಂದುವರಿಸಬೇಕು ಎಂದು ತಿಳಿಸಲಾಗಿದೆ.
ಕಾರ್ಯನಿರತ ವೈದ್ಯರು ಸೂಪರ್ ಸ್ಪೆಷಾಲಿಟಿ ಕೋರ್ಸ್ ಅನ್ನು ಪೂರ್ಣಗೊಳಿಸುವ ವೇಳೆಗೆ 40ರಿಂದ 45 ವರ್ಷಗಳನ್ನು ದಾಟಿರುತ್ತಾರೆ.
ಇದರಿಂದಾಗಿ ಅವರು 60 ವರ್ಷಕ್ಕೆ ನಿವೃತ್ತಿ ಹೊಂದುವ ಸಮಯದಲ್ಲಿ ಕೇವಲ 15ರಿಂದ 20 ವರ್ಷಗಳು ಸೇವೆ ಸಲ್ಲಿಸಲು ಮಾತ್ರ ಸಾಧ್ಯವಾಗುತ್ತದೆ. ಅವರ ವೃತ್ತಿ ಅನುಭವವನ್ನು ಸಂಪೂರ್ಣವಾಗಿ ಉಪಯೋಗಿಸಲು ಸಾಧ್ಯವಾಗುವುದಿಲ್ಲ. ವಯೋ ನಿವೃತ್ತಿ ವಿಸ್ತರಣೆಯಿಂದ ಸೇವಾ ಅನುಭವದ ಲಾಭ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.