
ಬೆಂಗಳೂರು: ‘ಅವಧಿ ಮುಗಿಯಲಿರುವ ರಾಜ್ಯದ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಸಕಾಲದಲ್ಲಿ ಚುನಾವಣೆ ನಡೆಸಲು ಅನುವಾಗುವಂತೆ ವಾರ್ಡ್‌ವಾರು ಮೀಸಲಾತಿ ಜೊತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ನಿರ್ದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಪ್ರಸಕ್ತ ವರ್ಷದ ಅಂತ್ಯಕ್ಕೆ ಅವಧಿ ಮುಕ್ತಾಯಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯಿತಿ ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿತು. ವಿಚಾರಣೆಯನ್ನು ಡಿಸೆಂಬರ್ 11ಕ್ಕೆ ಮುಂದೂಡಲಾಗಿದೆ.
‘ಕಲಬುರಗಿ ಜಿಲ್ಲೆ ಶಹಬಾದ ತಾಲ್ಲೂಕಿನ ವಾಡಿ ಪುರಸಭೆಯ ಅವಧಿ 2020ರ ನವೆಂಬರ್ 11ರಂದು ಮತ್ತು ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಪುರಸಭೆ ಅವಧಿ ಇದೇ ವರ್ಷದ ಸೆಪ್ಟಂಬರ್‌ನಲ್ಲಿ ಕೊನೆಗೊಂಡಿದೆ. ಅಕ್ಟೋಬರ್‌ನಲ್ಲಿ 59 ನಗರ ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದಿದೆ. ಉಳಿದ 126 ನಗರ ಸ್ಥಳೀಯ ಸಂಸ್ಥೆಗಳ ಅವಧಿ ನವೆಂಬರ್ ಮತ್ತು ಡಿಸೆಂಬರ್‌ಗೆ ಅಂತ್ಯವಾಗಲಿದೆ’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
‘ಇವೆಲ್ಲವುಗಳಿಗೆ ಮೀಸಲಾತಿ ನಿಗದಿಪಡಿಸುವಂತೆ ಈ ವರ್ಷದ ಜನವರಿ ಮತ್ತು ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗಿತ್ತು. ಆದರೆ, ಈವರೆಗೂ ಪ್ರಯೋಜನವಾಗಿಲ್ಲ. ಚುನಾವಣೆ ವಿಳಂಬವಾದರೆ ಆಡಳಿತಾಧಿಕಾರಿಗಳ ನೇಮಕವಾಗಲಿದೆ. ಇದು ಸಂವಿಧಾನ, ಪ್ರಜಾಪ್ರಭುತ್ವ ವಿರೋಧಿ’ ಎಂದು ಚುನಾವಣಾ ಆಯೋಗ ಅರ್ಜಿಯಲ್ಲಿ ದೂರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.