ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಮುಖ್ಯಮಂತ್ರಿಯವರ ಸಮ್ಮುಖದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಜುಲೈ 15ರಂದು ಚರ್ಚಿಸಿ ಬೇಡಿಕೆಗಳ ಈಡೇರಿಸುವ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ ಅವರು ಭರವಸೆ ನೀಡಿದ ಬೆನ್ನಲ್ಲೇ 10 ಮಹಾನಗರ ಪಾಲಿಕೆಗಳ ನೌಕರರು ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
‘ಮಹಾನಗರ ಪಾಲಿಕೆಗಳ ಸಿಬ್ಬಂದಿ ಮತ್ತು ನೌಕರರು ವಿವಿಧ ಬೇಡಿಕೆ ಸಂಬಂಧ ಮುಷ್ಕರ ನಡೆಸುತ್ತಿದ್ದು, ಅದರ ಬಗ್ಗೆ ಮಂಗಳವಾರ ತೀರ್ಮಾನ ಕೈಗೊಳ್ಳಲಾಗುತ್ತದೆ. ಹೀಗಾಗಿ, ತಮ್ಮ ಮುಷ್ಕರವನ್ನು ಕೂಡಲೇ ಅಂತ್ಯಗೊಳಿಸಿ, ಕರ್ತವ್ಯಕ್ಕೆ ಹಾಜರಾಗಬೇಕು’ ಎಂದು ಸಚಿವರು ಸಂಘಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
‘ಸಚಿವರ ಮನವಿಯ ಟಿಪ್ಪಣಿಯ ಬಗ್ಗೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಗೂಗಲ್ ಮೀಟ್‌ನಲ್ಲಿ ಶನಿವಾರ ಚರ್ಚಿಸಲಾಯಿತು. ಸಚಿವರು ಮಂಗಳವಾರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿರುವುದರಿಂದ ಮುಷ್ಕರವನ್ನು ತಕ್ಷಣದಿಂದ ವಾಪಸ್ ಪಡೆಯಲು ಸಭೆಯಲ್ಲಿ ನಿರ್ಧರಿಸಲಾಯಿತು. ಎಲ್ಲ ನೌಕರರೂ ಕೆಲಸಕ್ಕೆ ಹಾಜರಾಗಲಿದ್ದಾರೆ’ ಎಂದು ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್ ತಿಳಿಸಿದರು.
‘ಮುಷ್ಕರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆಯಲಾಗಿದೆ. ಜುಲೈ 15ರಂದು ನಡೆಯುವ ಸಭೆಯಿಂದ ಬೇಡಿಕೆಗಳನ್ನು ಈಡೇರಿಸದಿದ್ದರೆ, ಎಲ್ಲರೊಂದಿಗೆ ಚರ್ಚಿಸಿ ಸಂಘದ ನಿಲುವನ್ನು ಪ್ರಕಟಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.